ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಕ್ರಮಕೈಗೊಳ್ಳಿ: ರಘುನಂದನ್ ಮೂರ್ತಿ

KannadaprabhaNewsNetwork |  
Published : Feb 28, 2024, 02:37 AM IST
೨೭ಎಚ್‌ವಿಆರ್೧, ೧ಎ | Kannada Prabha

ಸಾರಾಂಶ

ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲಾದ್ಯಂತ ಮಾ.೩ರಂದು ಜರುಗಲಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು.

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ, ಮಾ.೩ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಹಾವೇರಿ

ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲಾದ್ಯಂತ ಮಾ.೩ರಂದು ಜರುಗಲಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಲಸಿಕಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೋಲಿಯೋ ಕಾರ್ಯಕ್ರಮಕ್ಕೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ವಿಶೇಷವಾಗಿ ಕಾಳಜಿ ವಹಿಸಬೇಕು. ಕೊಳಚೆ ಪ್ರದೇಶ, ಹೆಚ್ಚು ಅಪಾಯಕಾರಿ ಪ್ರದೇಶ, ಅನಾಥಾಶ್ರಮ, ವಲಸೆ ಕಾರ್ಮಿಕರ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕೇಂದ್ರಿಕರಿಸಿ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.

ಪೋಲಿಯೋ ಕಾರ್ಯಕ್ರಮದ ಕುರಿತು ಶಾಲಾ ಮಕ್ಕಳಿಂದ ಪ್ರಭಾತಪೇರಿ ಆಯೋಜಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಸದ ವಾಹನಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಹೆಸ್ಕಾಂ, ಸ್ಥಳೀಯ ನಗರ ಸಂಸ್ಥೆಗಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಲಸಿಕೆ ಕಾರ್ಯಕ್ರಮ ನಡೆಯುವ ಸಮಯದಲ್ಲಿ ಲಸಿಕೆ ಸುರಕ್ಷಿತವಾಗಿಡಲು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜಯಾನಂದ ಮಾತನಾಡಿ, ಜಿಲ್ಲೆಯಲ್ಲಿ ೧,೭೦,೧೬೮ ಸೊನ್ನೆಯಿಂದ ಐದು ವರ್ಷದ ಮಕ್ಕಳನ್ನು ಗುರುತಿಸಲಾಗಿದೆ. ಮಾ.೩ರಂದು ಬೂತ್ ಮಟ್ಟದಲ್ಲಿ, ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ಮೂಲಕ ಪೋಲಿಯೋ ಲಸಿಕೆ ಹಾಕಲಾಗುವುದು. ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆ, ತಾಲೂಕಾ ಆಸ್ಪತ್ರೆ, ಪಿಎಚ್‌ಸಿ ಸೇರಿದಂತೆ ಒಟ್ಟು ೧೦೦೪ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ೧೯೬ ಸೂಪರ್‌ವೈಸರ್, ೨೫೪ ಪಿಎಚ್‌ಸಿಒ, ೨೦೦೮ ವ್ಯಾಕ್ಸಿನೇರ್ಸ್‌, ೧೪೩೮ ಆಶಾ ಹಾಗೂ ೧೯೬೦ ಅಂಗನವಾಡಿ ಕಾರ್ಯಕರ್ತೆಯರನ್ನು ಪೋಲಿಯೋ ಕಾರ್ಯಕ್ಕೆ ನಿಯೋಜಿಸಲಾಗಿದೆ. ೯೨ ವ್ಯಾಕ್ಸಿನ್ ಸೆಂಟರ್‌ಗಳಿಂದ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ. ೯೩ ವಾಹನಗಳ ಅವಶ್ಯಕತೆ ಇದೆ ಎಂದು ತಿಳಿಸಿದರು.

ಬೆಳಗಾವಿಯ ಸರ್ವಲೆನ್ಸ್ ಮೆಡಿಕಲ್ ಆಫಿಸರ್ ಡಾ. ಸಿದ್ಧಲಿಂಗಯ್ಯ ಪೋಲಿಯೋ ಕಾರ್ಯಕ್ರಮದ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರವಾದ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಆರ್.ಎನ್. ಹಾವನೂರ, ಡಾ. ನೀಲೇಶ, ಡಾ. ಜಗದೀಶ, ಡಾ. ವಿರಕ್ತಿಮಠ, ಡಾ. ಸರಿತಾ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ವಿವಿಧ ತಾಲೂಕುಗಳ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ