ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

KannadaprabhaNewsNetwork |  
Published : Apr 22, 2025, 01:53 AM IST
21ಎಚ್‌ವಿಆರ್1 | Kannada Prabha

ಸಾರಾಂಶ

ನಮ್ಮ ದೇಶದಿಂದ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಾರ್ಷಿಕವಾಗಿ ಎರಡು ಬಾರಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.

ಹಾವೇರಿ: ಕಾಲುಬಾಯಿ ಬೇನೆಯು ಜಾನುವಾರುಗಳಿಗೆ ಮಾರಕವಾಗಿದ್ದು, ರೋಗದ ನಿರ್ಮೂಲನೆಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಹಾಗಾಗಿ ಇತರೆ ಇಲಾಖೆಗಳು ಪಶುಪಾಲನಾ ಇಲಾಖೆಯೊಂದಿಗೆ ಕೈಜೋಡಿಸಿ ಲಸಿಕಾ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲ ರೈತಾಪಿ ಜನರು ತಮ್ಮಲ್ಲಿರುವ ಎಲ್ಲ ಜಾನುವಾರುಗಳಿಗೆ(ದನ ಮತ್ತು ಎಮ್ಮೆಗಳಿಗೆ) ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು.ನಮ್ಮ ದೇಶದಿಂದ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಾರ್ಷಿಕವಾಗಿ ಎರಡು ಬಾರಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಜಾನುವಾರುಗಳು ರೈತನ ಬೆನ್ನೆಲುಬು. ಅವುಗಳ ರಕ್ಷಣೆಗೆ ಕಾಲ ಕಾಲಕ್ಕೆ ಲಸಿಕೆ ಹಾಕುವ ಮೂಲಕ ಮತ್ತು ರೋಗ ಪೀಡಿತ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಮೂಲಕ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಪಶುಪಾಲನಾ ಇಲಾಖೆಯ ವತಿಯಿಂದ ಸೂಕ್ತವಾಗಿ ನಿರ್ವಹಿಸಬೇಕು ಎಂದರು. ಪ್ರಚಾರ ಸಾಮಗ್ರಿ ಬಿಡುಗಡೆ:

ಇದೇ ಸಂದರ್ಭದಲ್ಲಿ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ಪೋಸ್ಟರ್ ಮತ್ತು ಬ್ಯಾನರ್ ಬಿಡುಗೊಳಿಸಿ ಮಾತನಾಡಿದ ಅವರು, ಲಸಿಕಾ ಕಾರ್ಯಕ್ರಮಕ್ಕೆ ಹಾವೇರಿ ಹಾಲು ಒಕ್ಕೂಟ ವ್ಯಾಪ್ತಿಯ ಸಿಬ್ಬಂದಿ ಸಹಕಾರ ಪಡೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜತೆಗೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮದ ಬಗ್ಗೆ ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. 2.95 ಲಕ್ಷ ಜಾನುವಾರುಗಳು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಎಸ್.ವಿ. ಸಂತಿ ಮಾತನಾಡಿ, ಏ. 26ರಿಂದ ಜೂ. 9ರ ವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು 2.95 ಲಕ್ಷ (ದನ ಮತ್ತು ಎಮ್ಮೆ) ಜಾನುವಾರುಗಳಿರುತ್ತವೆ. ಲಸಿಕಾ ಅಭಿಯಾನದಲ್ಲಿ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯು ಮನೆ ಬಾಗಿಲಿಗೆ ಹೋಗಿ ಕಾಲುಬಾಯಿ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ, ಯೋಜನಾ ನಿರ್ದೇಶಕರು, ಹಾವೇರಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು, ಲಸಿಕಾ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಅಧಿಕಾರಿ ಡಾ. ಕಿರಣ ಕೊಪ್ಪದ, ಮುಖ್ಯ ಪಶುವೈದ್ಯಾಧಿಕಾರಿಗಳು(ತಾಂತ್ರಿಕ), ಎಲ್ಲ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌