ಗ್ಯಾರಂಟಿ ಯೋಜನೆಗಳ ಉತ್ಸವ ಪೂರ್ವಭಾವಿ ಸಭೆ । ಗ್ಯಾರಂಟಿ ಉತ್ಸವ ಶಿಸ್ತು ಬದ್ಧವಾಗಿ ನಡೆಸಬೇಕು
ಜಿಲ್ಲೆಯಲ್ಲಿ ಫೆ.23ರಂದು ಆಯೋಜಿಸಲಾಗುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸುವಂತೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ (ಮೈಸೂರು ವಿಭಾಗ) ಡಾ.ಪುಷ್ಪಾ ಅಮರನಾಥ್ ತಿಳಿಸಿದರು.ಬುಧವಾರ ಜಿಪಂನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಉತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ಅಭಿವೃದ್ಧಿಯಲ್ಲಿ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಗ್ಯಾರಂಟಿ ಉತ್ಸವದ ಮೂಲಕ ಪ್ರತಿ ಮನೆಗಳಿಗೆ ಮತ್ತು ವ್ಯಕ್ತಿಗಳಿಗೆ ತಲುಪಬೇಕು. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಉತ್ಸವ ಶಿಸ್ತು ಬದ್ಧವಾಗಿ ನಡೆಸಬೇಕು ಎಂದು ಸೂಚಿಸಿದರು.
ಗ್ಯಾರಂಟಿ ಉತ್ಸವದ ಯಶಸ್ಸಿಗೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಗಾಗಲೇ ಹಲವು ಸಮಿತಿಗಳನ್ನು ರಚಿಸಿ ಸುವ್ಯವಸ್ಥಿತ ಕಾರ್ಯಕ್ರಮ ಆಯೋಜನೆಗೆ ಆದೇಶಿಸಿದ್ದಾರೆ. ಇದು ಸರ್ಕಾರದ ಮಹತ್ವದ ಕಾರ್ಯಕ್ರಮ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಮ್ಮ ಜವಾಬ್ದಾರಿಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ಅತಿಥಿಗಳಿಗೆ ಸರಿಯಾದ ಮಾಹಿತಿ ನೀಡಿ ಆಹ್ವಾನಿಸಿ ಯಾವುದೇ ಲೋಪಗಳು ಕಂಡು ಬಂದಲ್ಲಿ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಎಲ್ಲಾ ಇಲಾಖೆ ಅಧಿಕಾರಿಗಳು ಒಗ್ಗಟ್ಟಿನಿಂದ ಸಮನ್ವಯ ದೊಂದಿಗೆ ಪರಸ್ಪರ ಚರ್ಚಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಸಾರಿಗೆ, ಊಟದ ವ್ಯವಸ್ಥೆ ಸಮರ್ಪಕವಾಗಿ ಮಾಡ ಬೇಕು ಹಾಗೂ ಯಾವುದೇ ರೀತಿ ಲೋಪ ಕಂಡು ಬರಬಾರದು ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಫೆ.23 ರಂದು ಆಯೋಜಿಸಲಾಗುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಉತ್ಸವದ ಕುರಿತು ಬುಧವಾರ ಪೂರ್ವಭಾವಿ ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಜಿಪಂ ಸಿಇಒ ಕೀರ್ತನಾ ಮೊದಲಾದವರಿದ್ದರು.