ಕನ್ನಡಪ್ರಭ ವಾರ್ತೆ ರಾಯಚೂರು
ಭಾನುವಾರ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು ಮತ್ತು ತಾಲೂಕಿನಲ್ಲಿ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಸುರೇಶ ವರ್ಮಾ ಹೇಳಿದರು.ಸ್ಥಳೀಯ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ, ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಹಾಗೂ ಫ್ಲೋರೋಸಿಸ್ ಬಗ್ಗೆ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು, ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲಾ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಬೇಕು ಎಂದು ತಿಳಿಸಿದರು.ಸದೃಢ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಂದು ಶಾಲೆಯಲ್ಲಿ ಪ್ರಭಾತ ಪೆರಿ ಮಾಡಿಸಿ, ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸಬೇಕು. ಪ್ರಥಮ ಹಂತದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ, ದ್ವಿತೀಯ ಹಂತದಲ್ಲಿ ಶಾಲೆಯ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ನೀಡಿ ಶಾಲೆಯಿಂದ ಹೊರ ಉಳಿದ ಮಕ್ಕಳಿಗೆ ಸಹ ಮಾತ್ರೆ ನೀಡುವ ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು.
ಎಲ್ಲ ಇಲಾಖೆಗಳು ಫ್ಲೋರೊಸಿಸ್ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಸಿದರು. ಫ್ಲೋರೊಸಿಸ್ ಭಾದಿತ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಹಾಗೂ ಶಾಲೆಗಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಕುಮಾರ ಮಾತನಾಡಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗರಾವ್ ಕುಲಕರ್ಣಿ ಐಕೂರ, ಕ್ಷೇತ್ರ ಶಿಕ್ಷಣಾಧಿಕಾರಿ ಸರೋಜ, ರೋಗವಾಹಕ ಆಶ್ರಿತ ರೋಗಗಳ ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ, ಶಿಶು ಅಭಿವೃದ್ಧಿ ಅಧಿಕಾರಿಗಳು, ನಗರ ಸಭೆ ಅಧಿಕಾರಿಗಳು, ಸಂಗಮೇಶ್ವರ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ, ಜೆಸ್ಕಾಂ ಅಧಿಕಾರಿಗಳು ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.