ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಶಿವಾನಂದ

KannadaprabhaNewsNetwork |  
Published : Jun 16, 2024, 01:50 AM IST
ಫೋಟೋ15kst3: ಕುಷ್ಟಗಿ ಪಟ್ಟಣದ ಎಸ್ ವಿ ಎಮ್ ಕಾಲೇಜಿನಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸೋಮಶೇಖರ ಮೇಟಿ ಅವರು ಮಾತನಾಡಿದರು | Kannada Prabha

ಸಾರಾಂಶ

ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಕುಷ್ಟಗಿ

ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಹೇಳಿದರು.

ಪಟ್ಟಣದ ಎಸ್.ವಿ.ಎಂ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಮಳೆಗಾಲ ಪ್ರಾರಂಭವಾದ ಕಾರಣ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ಅನಾಫಿಲಿಸ್ ಎಂಬ ಸೋಂಕಿತ ಹೆಣ್ಣು ಸೊಳ್ಳೆಗಳಿಂದ ಮಲೇರಿಯಾ ಜ್ವರ ಹರಡುತ್ತದೆ. ಈ ರೋಗದ ಲಕ್ಷಣಗಳಾದ ತಲೆನೋವು, ವಾಂತಿ, ವಿಪರೀತ ಚಳಿಜ್ವರ, ಮೈನಡುಕ ಲಕ್ಷಣಗಳಿದ್ದರೆ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ರಕ್ತ ಪರೀಕ್ಷೆ ಮಾಡಿಸಿ, ಖಚಿತ ಪಟ್ಟರೆ ಚಿಕಿತ್ಸೆ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷತನ ಮಾಡಬಾರದು ಎಂದರು.

ಕಾಲೇಜಿನ ವಿದ್ಯಾರ್ಥಿಗಳಾದ ತಾವು ತಮ್ಮ ತಮ್ಮ ಮನೆಗಳಲ್ಲಿ ನೀರು ಶೇಖರಿಸುವ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟಿ, ಕಲ್ಲಿನದೋಣಿ ಇನ್ನಿತರ ನೀರು ಸಂಗ್ರಹ ಪರಿಕರಗಳನ್ನು ವಾರದಲ್ಲಿ 2 ಬಾರಿ ಸ್ವಚ್ಛವಾಗಿ ತೊಳೆದು, ಒಣಗಿಸಿ ಪುನಃ ನೀರು ತುಂಬಬೇಕು. ಸಲಕರಣೆಗಳಿಗೆ ಭದ್ರವಾಗಿ ಮುಚ್ಚಳದಿಂದ ಮುಚ್ಚಬೇಕು, ಸಾಯಂಕಾಲ ವೇಳೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಮನೆಯ ಸುತ್ತ ಮುತ್ತಲೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಮನೆಯಲ್ಲಿ ನೀರು ಶೇಖರಣಾ ತೊಟ್ಟಿಗಳಲ್ಲಿ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಭಿವೃದ್ಧಿ ಮಾಡುತ್ತವೆ. ಇದನ್ನು ತಡೆಯಲು ಲಾರ್ವಾ ನಾಶಕ್ಕಾಗಿ ಸ್ವಚ್ಛಗೊಳಿಸುತ್ತಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಭೇಟಿ ನೀಡಿದಾಗ ಸಹಕರಿಸಿ, ರಕ್ತಲೇಪನ ನೀಡಿ ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕೈ ಜೋಡಿಸುವಂತೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಶರಣಮ್ಮ ಪಾಟೀಲ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸೋಮಶೇಖರ ಮೇಟಿ, ಚಿದಂಬರ ಜೋಶಿ, ಮಲೇರಿಯಾ ತಾಂತ್ರಿಕ ಮೇಲ್ವಿಚಾರಕ ಪ್ರಕಾಶ ಗುತ್ತೆದಾರ, ಸಹ ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV

Recommended Stories

ಬೆಂಗಳೂರಲ್ಲಿ ಭರ್ಜರಿ ಮಳೆಗೆ ವಾಹನ ಸವಾರರ ಪರದಾಟ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ