ಮಳವಳ್ಳಿ: ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಿ

KannadaprabhaNewsNetwork |  
Published : Nov 24, 2026, 12:45 AM IST
23ಕೆಎಂಎನ್ ಡಿ12 | Kannada Prabha

ಸಾರಾಂಶ

ವಕೀಲರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಾಲಿ ಕಟ್ಟಡದಲ್ಲಿ ಮೊದಲ ಮಹಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಸಿಎಂಐಡಿಪಿ 45 ಲಕ್ಷ ರು. ಹಣವನ್ನು ಬಿಡುಗಡೆಗೊಳಿಸಲಾಗುತ್ತಿದೆ. ತಕ್ಷಣದಲ್ಲಿಯೇ ಕಾಮಗಾರಿ ಆರಂಭಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕು ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಹೈಕೋರ್ಟ್ ನ್ಯಾಯಾಧೀಶರು ಪ್ರಸ್ತಾವನೆ ಸಲ್ಲಿಸಿದರೇ ತಕ್ಷಣದಲ್ಲಿಯೇ ಸರ್ಕಾರದಿಂದ 25 ಕೋಟಿ ರು. ಅನುದಾನ ಬಿಡುಗಡೆಗೊಳ್ಳಲಿದೆ ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಜಿಲ್ಲಾ ನ್ಯಾಯಾಲಯ, ಲೋಕೊಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಆಶ್ರಯದಲ್ಲಿ ಪಟ್ಟಣದ ನ್ಯಾಯಾಲಯದ ಹಳೆಯ ಕಟ್ಟಡದ ಮೊದಲ ಮಹಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ವರ್ಚುವಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ನ್ಯಾಯಾಲಯದ ನಿವೇಶನ ಸಂಬಂಧಿಸಿದ ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದರು.

ವಕೀಲರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಾಲಿ ಕಟ್ಟಡದಲ್ಲಿ ಮೊದಲ ಮಹಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಸಿಎಂಐಡಿಪಿ 45 ಲಕ್ಷ ರು. ಹಣವನ್ನು ಬಿಡುಗಡೆಗೊಳಿಸಲಾಗುತ್ತಿದೆ. ತಕ್ಷಣದಲ್ಲಿಯೇ ಕಾಮಗಾರಿ ಆರಂಭಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದರು.

ನೋಟರಿ ವಕೀಲರ ನೇಮಕ ಸಂಬಂಧ ಕಾನೂನು ಸಚಿವರ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ಮೂಲಕ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಹೈಕೊರ್ಟ್ ನ್ಯಾಯಾಧೀಶರಾದ ಸುನೀಲ್ ದತ್ ಯಾದವ್ ವರ್ಚುವಲ್ ಮೂಲಕ ಮಾತನಾಡಿ, ನ್ಯಾಯಾಲಯ ಕಲಾಪಗಳ ಅನುಕೂಲಕ್ಕಾಗಿ ಮೊದಲ ಮಹಡಿ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಿರುವುದು ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿಗೆ ಅನುಕೂಲವಾಗಿದೆ. ವಕೀಲರ ಸಂಘದ ಬೇಡಿಕೆ ಈಡೇರಿಸಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಮುಂದಾಬೇಕು ಎಂದರು.

ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಯ್ಯ ರಾಚಯ್ಯ ಮಾತನಾಡಿ, ತವರು ಜಿಲ್ಲೆಯಲ್ಲೇ ನ್ಯಾಯಾಲಯ ಕಟ್ಟಡದ ಮೊದಲ ಮಹಡಿ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿರುವುದು ಸಂತಸದ ವಿಚಾರ. ಯುವ ವಕೀಲರು ಬದ್ಧತೆ, ಪರಿಶ್ರಮದಿಂದ ಜವಾಬ್ದಾರಿ ಅರಿತು, ಕಕ್ಷಿದಾರರಿಗೆ ನ್ಯಾಯ ಕೊಡಿಸಬೇಕೆಂದು ಸಲಹೆ ನೀಡಿದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಡಿ.ಎಂ.ಸುಂದರ್ ಮಾತನಾಡಿ, ತಾಲೂಕಿನಲ್ಲಿ 10 ಸಾವಿರಕ್ಕೂ ಹೆಚ್ಚು ದಾವೆಗಳು ಬಾಕಿ ಇದ್ದು, ಎಲ್ಲಾ ಪ್ರಕರಣಗಳನ್ನು ಇತ್ಯಾರ್ಥಗೊಳಿಸಲು ಕನಿಷ್ಠ ಆರು ನ್ಯಾಯಾಲಯಗಳು ಅವಶ್ಯಕತೆ ಇವೆ. ಪ್ರಸ್ತುತ ನ್ಯಾಯಾಲಯದಲ್ಲಿ ಕಿರಿದಾದ ಸ್ಥಳದಲ್ಲಿ ವಕೀಲರು ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿಗೆ ತೊಂದರೆಯಾಗುತ್ತಿತ್ತು. ಹೆಚ್ಚುವರಿ ಕಟ್ಟಡಕ್ಕಾಗಿ ಸಚಿವರಿಗೆ ಮನವಿ ಮಾಡಿಕೊಂಡಾಗ ವಿಶೇಷ ಅನುದಾನದಲ್ಲಿ ಹಣ ಬಿಡುಗಡೆಗೊಳಿಸಿದ್ದು, ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ತಾಲೂಕು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ನಿಗದಿಗೊಂಡಿರುವ 2 ಎಕರೆ ಜಾಗದಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ತಕ್ಷಣ ಕಾಮಗಾರಿ ಆರಂಭಿಸಲು ಸಚಿವರು ಅನುವು ಮಾಡಿಕೊಡಬೇಕು. ವಕೀಲರು ಹಾಗೂ ನ್ಯಾಯಾಲಯಕ್ಕೆ ಅನುಕೂಲವಾಗುವಂತೆ ಹೆಚ್ಚುರಿ ನೋಟರಿ ವಕೀಲರನ್ನು ನೇಮಿಸಬೇಕೆಂದು ಮನವಿ ಮಾಡಿದರು.

ವಕೀಲರ ಸಂಘದಿಂದ ಸಚಿವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಚಂದ್ರಶೇಖರ್, ನ್ಯಾಯಾಧೀಶರಾದ ಮಹೇಂದ್ರ, ನಾಜಿಯಾ ಕೌಸರ್, ಅಶ್ವಿನಿ, ಲೋಕೊಪಯೋಗಿ ಕಾರ್ಯಪಾಲಕ ಅಭಿಯಂತರ ಪುರುಷೋತ್ತಮ್, ತಹಶೀಲ್ದಾರ್ ಉಮೇಶ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ ನಟೇಶ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿತೆಗಳು ಜೀವಪರ ಸಂದೇಶ ಸಾರುವಂತಿರಲಿ
ಶುಂಠಿ ಕಣ ಬಂದ್ ಮಾಡಿದರೆ ಶಾಸಕರು ಖರೀದಿಸ್ತಾರಾ?