
ಶಿವಮೊಗ್ಗ: ನರೇಂದ್ರ ಮೋದಿ ಅವರು ಬೊಗಳುತ್ತಾರೆ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಕೀಳು ಮನಸ್ಥಿತಿಯನ್ನು ಮತ್ತೊಮ್ಮೆ ಬಯಲು ಮಾಡಿದ್ದಾರೆ. ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಇನ್ನು ಧರ್ಮಸ್ಥಳ ಪ್ರಕರಣ ಕುರಿತು ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚನೆ ಮಾಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದರು.
ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದಕ್ಕೆ ದೇವಾಲಯ ಸಮಿತಿ ಕೂಡ ಸ್ವಾಗತಿಸಿದೆ. ಹಾಗೆಯೇ ನಾನೂ ಕೂಡ ಎಸ್‌ಐಟಿ ತನಿಖೆಯನ್ನು ಸ್ವಾಗತಿಸುತ್ತೇನೆ. ಅಲ್ಲಿ ತಪ್ಪು ನಡೆದಿದ್ದರೆ, ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಈ ಕುರಿತು ಸುಳ್ಳು ಹಬ್ಬಿಸಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.