ಸೋಮರಡ್ಡಿ ಅಳವಂಡಿ
ಮಾಜಿ ಸಂಸದ ಸಂಗಣ್ಣ ಕರಡಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಿರೀಕ್ಷೆಯಂತೆ ಯಾವುದೇ ಹುದ್ದೆ ಇದುವರೆಗೂ ಅವರಿಗೆ ಲಭಿಸಿರಲಿಲ್ಲ. ಕಾಂಗ್ರೆಸ್ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅವರನ್ನೇ ನೇಮಕ ಮಾಡುತ್ತಾರೆ ಎನ್ನುವ ನಿರೀಕ್ಷೆ ಈಗ ಹುಸಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸ್ಥಳೀಯ ನಾಯಕರ ಅಭಿಪ್ರಾಯ ಮೀರಿ ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದೆ.
ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಅಧ್ಯಕ್ಷ ಅವಧಿ ಇನ್ನೂ ಮುಗಿದಿಲ್ಲ, ಅವರನ್ನೇ ಮುಂದುವರಿಸಬೇಕು ಎನ್ನುವ ಬೇಡಿಕೆಗೂ ಮನ್ನಣೆ ಸಿಕ್ಕಿಲ್ಲ.ಗಂಗಾವತಿಗೆ ಶಿಫ್ಟ್: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ, ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕವಾದ ಮೇಲೆ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಪವರ್ ಸೆಂಟರ್ ಕೊಪ್ಪಳದಿಂದ ಗಂಗಾವತಿಗೆ ಶಿಫ್ಟ್ ಆಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಗಂಗಾವತಿಯ ''''ವೈಟ್‌ಹೌಸ್'''' ಮತ್ತೆ ಅಧಿಕಾರ ಕೇಂದ್ರವಾಗುವ ಲಕ್ಷಣ ಸ್ಪಷ್ಟವಾಗಿ ಗೋಚರವಾಗುತ್ತದೆ.
ಅಷ್ಟೇ ಅಲ್ಲ, ಕೊಪ್ಪಳ ಜಿಲ್ಲೆಗೆ ಆಗಮಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿದ್ದು, ಆನಂತರ ಅವರನ್ನು ಆಹ್ವಾನಿಸಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಷ್ಟೇ ಅಲ್ಲ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕವಾಗುತ್ತಿದ್ದಂತೆ ಇಂಥದ್ದೊಂದು ಬೆಳವಣಿಗೆ ಕೊಪ್ಪಳ ಜಿಲ್ಲೆಯಲ್ಲಿ ಆಗಬಹುದು ಎಂಬ ನಿರೀಕ್ಷೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮಲ್ಲಿಕಾರ್ಜುನ ನಾಗಪ್ಪ ಅವರನ್ನು ನೇಮಕ ಮಾಡುತ್ತಿದ್ದಂತೆ ಅನಾವರಣವಾಯಿತು.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಅವರು ಎಂ. ಮಲ್ಲಿಕಾರ್ಜುನ ಅವರನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿರುವುದು ಸಂತಸದ ಸಂಗತಿ. ಈ ಹಿಂದೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ಮಲ್ಲಿಕಾರ್ಜುನ ನಾಗಪ್ಪ ಅವರ ಸೇವೆ ಗುರುತಿಸಿ ಮಹತ್ವದ ಜವಾಬ್ದಾರಿ ನೀಡಲಾಗಿದೆ ಎಂದಿದ್ದಾರೆ. ಮಲ್ಲಿಕಾರ್ಜುನ ನಾಗಪ್ಪ ನೇಮಕಕ್ಕೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.