ಗದಗ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 207 ಸ್ಥಾನಗಳಲ್ಲಿ ಗೆದ್ದಿದ್ದು, ಆದರೂ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡದೇ ಮೊಂಡುತನ ಮಾಡುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ್ ಟೀಕಿಸಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 15 ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಿದ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಬೇಸತ್ತ ಜನ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದ ಬಿಜೆಪಿಗೆ ಬಹುಮತ ನೀಡಿದ್ದಾರೆ. ಟಿಎಂಸಿಯ ಗೂಂಡಾಗಿರಿ ಸತತವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ, ಕೇಂದ್ರ ಸರ್ಕಾರದ ಯೋಜನೆಗಳನ್ನು ಜಾರಿಗೆ ತರದೇ ಜನರಿಗೆ ಮೋಸ ಮಾಡಿದ್ದನ್ನು ಅರಿತ ಅಲ್ಲಿಯ ಜನ ಟಿಎಂಸಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.100 ಕ್ಷೇತ್ರಗಳಲ್ಲಿ ಮತಚೋರಿ ಆಗಿದೆ ಎಂದು ಮಮತಾ ಬ್ಯಾನರ್ಜಿ ಅವರು ಆರೋಪಿಸಿದ್ದಾರೆ. ಇದನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿಲುವು ದಿವಾಳಿತನದ ಪರಮಾವಧಿಯಾಗಿದೆ. ಒಂದು ರಾಜ್ಯದ ಜನ ಸರ್ಕಾರ ಬದಲಿಸಿದಾಗ ಅದರಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಚುನಾಯಿತ ಸರ್ಕಾರದ ಜವಾಬ್ದಾರಿ. ಅದನ್ನು ಬಿಟ್ಟು ಬೇಜಾವಾಬ್ದಾರಿಯಿಂದ ಹೇಳಿಕೆ ನೀಡುವ ಮಮತಾ ಬ್ಯಾನರ್ಜಿ ಹಾಗೂ ರಾಹುಲ್ ಗಾಂಧಿಯವರ ನಡೆಯನ್ನು ತೀವ್ರವಾಗಿ ಖಂಡಿಸಿದರು. ಮೇ 9ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯ ಪ್ರವೇಶಿಸಿ 50 ವರ್ಷ ಕಳೆದ ಸಂಭ್ರಮಚಾರಣೆಯನ್ನು ಚಿತ್ರದುರ್ಗ ನಗರದಲ್ಲಿ ಅಭಿಮಾನೋತ್ಸವ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಹೆಚ್ಚಿನ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.