ಶಿರಹಟ್ಟಿ: ಮಾ.೨೫ ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಕೈಗೊಂಡು ಪರೀಕ್ಷೆಗಳನ್ನು ಪಾರದರ್ಶಕ ಮತ್ತು ಸುಗಮವಾಗಿ ಸರ್ಕಾರದ ಮಾರ್ಗಸೂಚಿ ಮತ್ತು ಆದೇಶದಂತೆ ನಿರ್ವಹಿಸಬೇಕು. ಜತೆಗೆ ನಕಲು ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್ ಸೂಚಿಸಿದರು.
ಗುರುವಾರ ತಹಸೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿ ಮಾತನಾಡಿದರು.ಈಗಾಗಲೇ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಯಾವುದೇ ರೀತಿಯಿಂದ ಲೋಪದೋಷ ಆಗದಂತೆ ಕಾರ್ಯನಿರ್ವಹಿಸಬೇಕು. ತಾಲೂಕು ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಯಾವುದೇ ಕಳವಳ, ಅಭದ್ರತೆಯ ಭಯವಿಲ್ಲದೇ ಪರೀಕ್ಷೆ ಬರೆಯಬೇಕು ಎಂದು ಹೇಳಿದರು.
ತಾಲೂಕಿನಲ್ಲಿ ಪರೀಕ್ಷೆ ಎದುರಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ೧೪, ಅನುದಾನಿತ ಪ್ರೌಢ ಶಾಲೆಗಳು ೮, ಅನುದಾನ ರಹಿತ ಪ್ರೌಢ ಶಾಲೆಗಳು ೨ ಒಟ್ಟು ೨೪ ಶಾಲೆಗಳಿದ್ದು, ಒಟ್ಟು ೧.೩೨೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ಮಗು ಕೂಡ ಪರೀಕ್ಷೆ ಬರೆಯುವುದರಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಶಿರಹಟ್ಟಿ ತಾಲೂಕಿನಲ್ಲಿ ಒಟ್ಟು ೬ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ೬ ಜನ ಅಧೀಕ್ಷಕರು, ೬ ಜನ ಕಸ್ಟೋಡಿಯನ್, ೬ ಜನ ಸ್ಥಾನಿಕ ಜಾಗೃತ ದಳದ ಅಧಿಕಾರಿ, ೩ಜನ ಮಾರ್ಗಾಧಿಕಾರಿಗಳು, ೬ ಜನ ಮೊಬೈಲ್ ಸ್ವಾಧೀನಾಧಿಕಾರಿಗಳು, ೧೧೫ ಜನ ಕೊಠಡಿ ಮೇಲ್ವಿಚಾರಕರು, ೧೨ ಜನ ಆರೋಗ್ಯ ಇಲಾಖೆ ಸಿಬ್ಬಂದಿ ೧೨ ಜನ ಪೊಲೀಸ್ ಸೇರಿ ಒಟ್ಟು ೧೬೬ ಸಿಬ್ಬಂದಿ ನೇಮಕ ಮಾಡಲಾಗಿದೆ. ಪ್ರಸ್ತುತ ವರ್ಷ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಕನ್ನಡ ಮಾಧ್ಯಮ ೧೦೯೦, ಆಂಗ್ಲ ಮಾಧ್ಯಮ ೧೯೦, ಉರ್ದು ಮಾಧ್ಯಮ ೪೯ ಸೇರಿ ಒಟ್ಟು ೧೩೨೯ ವಿದ್ಯಾರ್ಥಿಗಳು ಮಾಧ್ಯಮವಾರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ವಿ.ಪ್ರಶಾಂತರಾವ್ ಮಾತನಾಡಿ, ಪರೀಕ್ಷಾ ವೇಳೆಯಲ್ಲಿ ಮಕ್ಕಳ ಹಾಜರಾತಿ ಶೇ.೧೦೦ರಷ್ಟು ಕಡ್ಡಾಯವಾಗಿ ಮಾಡಬೇಕು. ಹಳ್ಳಿಯಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ತೊಂದರೆಯಾಗದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಗಮನಿಸಬೇಕು ಎಂದು ಸೂಚನೆ ನೀಡಿದರು.
ಮಾ.೨೫ ರಿಂದ ಏ. ೬ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆ ಕೇಂದ್ರಗಳಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಜವಾಬ್ದಾರಿಯುತ ಕಾರ್ಯನಿರ್ವಹಿಸಬೇಕು. ಪರೀಕ್ಷೆ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ನಿಗಾ ವಹಿಸಬೇಕು. ಪರೀಕ್ಷೆ ಕೇಂದ್ರಗಳಲ್ಲಿ ಕುಡಿವ ನೀರು, ಶೌಚಾಲಯ, ಸ್ವಚ್ಛತಾ ಕಾರ್ಯಗಳು ವ್ಯವಸ್ಥಿತವಾಗಿರಬೇಕು. ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅವಶ್ಯ ಸೌಲಭ್ಯ ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಬೇಕು ಎಂದು ತಿಳಿಸಿದರು.ತಹಸೀಲ್ದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯು.ಜಿ.ಹುಚ್ಚಯ್ಯನಮಠ, ಎಸ್.ಕೆ.ವಾಲಿ, ಹನುಮೇಶ ಕೊಂಡಿಕೊಪ್ಪ, ಆರ್.ಎಫ್. ಬಟಗುರ್ಕಿ, ಎಚ್.ಟಿ. ಬಿಜ್ಜೂರ, ಹರೀಶ್ ಎಸ್, ಶ್ರೀನಿವಾಸ ನಾಯಕ ಸೇರಿ ಅನೇಕರು ಇದ್ದರು.