ಬಳ್ಳಾರಿ: ನಗರದಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ನ.2ರಿಂದ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾ ಪೊಲೀಸ್ ಇಲಾಖೆ ನಿರ್ಧರಿಸಿದೆ. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವ ಸವಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಎಚ್ಚರಿಸಿದ್ದಾರೆ.
ಹೆಲ್ಮೆಟ್ ಧರಿಸದ ಯುವಕನಿಗೆ ಗಂಭೀರ ಗಾಯ:
ಅ.15ರಂದು ಬೆಳಗ್ಗೆ 7.30ರ ಸುಮಾರಿಗೆ 16 ವರ್ಷದ ವಿದ್ಯಾರ್ಥಿಯೊಬ್ಬ ಎನ್‌ಎಚ್-150(ಎ) ರಸ್ತೆಯಲ್ಲಿ ಮೋಟಾರ್ ಸೈಕಲ್ ಚಲಾಯಿಸುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದಾನೆ. ಪರಿಣಾಮ ತಲೆಗೆ ತೀವ್ರ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿದ್ಯಾರ್ಥಿ ಹೆಲ್ಮೆಟ್ ಧರಿಸದೆ ಇದ್ದುದರಿಂದ ತಲೆಗೆ ಗಂಭೀರ ಗಾಯಗಳಾಗಿವೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಹೆಲ್ಮೆಟ್ ಬಳಕೆ ಕಡ್ಡಾಯಗೊಳಿಸುವುದು ಅನಿವಾರ್ಯವಾಗಿದೆ ಎಂದು ಪೊಲೀಸ್ ಇಲಾಖೆ ಅಭಿಪ್ರಾಯಪಟ್ಟಿದೆ.ನಿಯಮ ಉಲ್ಲಂಘಿಸಿದರೆ ಕ್ರಮ: ವಾಹನ ಸವಾರರ ಅಮೂಲ್ಯ ಪ್ರಾಣ ಹಾಗೂ ಅಪಘಾತಗಳಿಂದ ಉಂಟಾಗುವ ಅಂಗವೈಕಲ್ಯ ತಡೆಗಟ್ಟುವ ಉದ್ದೇಶದಿಂದ ನ. 2ರಿಂದ ಹೆಲ್ಮೆಟ್ ಧರಿಸುವ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. ವಾಹನ ಸವಾರರು ತಮ್ಮ ಸುರಕ್ಷತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವ ಮೂಲಕ ತಮ್ಮ ಅಮೂಲ್ಯ ಜೀವ ಕಾಪಾಡಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.