ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಶಾಲಾ-ಕಾಲೇಜು ಆವರಣಗಳಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ವಸ್ತುಗಳು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ, ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚಿಸಿದರು.
2024 ಏಪ್ರಿಲ್ ಮಾಹೆಯಿಂದ ಸೆಪ್ಟೆಂಬರ್ ಮಾಯೆವರೆಗೆ ಜಿಲ್ಲೆಯಲ್ಲಿ ತಂಬಾಕು ತ್ಯಜಿಸಿದವರ ಸಂಖ್ಯೆ 265 ಆಗಿದೆ. ಇದೇ ರೀತಿ ಇನ್ನು ಹೆಚ್ಚಿನ ಮಟ್ಟದಲ್ಲಿ ತಂಬಾಕನ್ನು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕು.ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿ, ಅಗತ್ಯವಿದ್ದಲ್ಲಿ ಪ್ರಕರಣ ದಾಖಲಿಸಬೇಕು. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕೆಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ವಿಶ್ವ ಸಂಸ್ಥೆಯ ಸರ್ವೆಕ್ಷಣಾಧಿಕಾರಿ ಡಾ.ನಾಗರಾಜ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಹೇಮಾವತಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಸೀಮಾ ಮಾಬಳೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರರಾದ ಡಾ.ವಿದ್ಯಾರಾಣಿ.ಪಿ.ಎಸ್, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಶಾಂತಲಾ ಬಿ.ಎನ್ ಸೇರಿಂತೆ ಮತ್ತಿತರರಿದ್ದರು.ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆ್ಯಪ್ ಬಳಸಿ:
ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆ್ಯಪ್ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಬಳಸಬಹುದಾಗಿದೆ. ಕಾನೂನು ಬಾಹಿರ ತಂಬಾಕು ಮಾರಾಟ ಮಾಡುವ ಪ್ರದೇಶದ ಕುರಿತು ಈ ಆ್ಯಪ್ ಮೂಲಕ ಸಾರ್ವಜನಿಕರು ಮಾಹಿತಿ ನೀಡಬಹುದು. ಮಾಹಿತಿ ನೀಡಿದ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ತಂಬಾಕು ಬಳಕೆ ನಿಯಂತ್ರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಹೇಳಿದರು.