ಮಂಡ್ಯ: ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ

KannadaprabhaNewsNetwork | Published : Feb 11, 2025 12:46 AM

ಸಾರಾಂಶ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸುವಂತೆ ಒತ್ತಾಯ.

ಕನ್ನಡಪ್ರಭ ವಾರ್ತೆ ಮಂಡ್ಯ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಗರದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ನಗರದ ತಾಲೂಕು ಕಚೇರಿ ಬಳಿ ಕಪ್ಪು ಪಟ್ಟಿ ಧರಿಸಿ ಜಮಾಯಿಸಿದ ಗ್ರಾಮ ಆಡಳಿತ ಅಧಿಕಾರಿಗಳು, ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸುವಂತೆ ಒತ್ತಾಯಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನಶ್ರೇಣಿ ನಿಗಧಿಪಡಿಸಿ ಆದೇಶ ನೀಡುವುದು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವುದು. ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ 16ಎರ ಉಪಖಂಡ (2)ನ್ನು ಮರುಸ್ಥಾಪಿಸುವಂತೆ ಆಗ್ರಹಿಸಿದರು.

ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ವಾರಸುದಾರರ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳಿಲ್ಲದೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಚಾಲನೆ ನೀಡುತ್ತಿರುವುದನ್ನು ಕೈಬಿಡುವಂತೆ ಒತ್ತಾಯಿಸಿದರು.

ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡುವಂತೆ ಒತ್ತಾಯಿಸಿದರು.

ಕ್ಷೇತ್ರ ಮಟ್ಟದಲ್ಲಿ ಕರ್ತವ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರು. ಪರಿಹಾರ ಮಂಜೂರು ಮಾಡಬೇಕು. ಮಾತೃ ಇಲಾಖೆಯ ಎಲ್ಲಾ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ, ಅತಿವೃಷ್ಠಿ, ಅನಾವೃಷ್ಠಿ ಇನ್ನಿತರ ಗುರುತರವಾದ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದ್ದು, ಇರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿರುವಂತೆ 3 ಸಾವಿರ ರು. ಆಪತ್ತಿನ ಭತ್ಯೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧರಣಿ ನಡೆಸಿದರು.

ಮುಖಂಡರಾದ ಯೋಗೇಶ್ ನಾಯ್ಕ್, ಕುಮಾರ, ಗುಣಶೇಖರ್, ಮಾನಸ, ತೇಜಸ್‌ಗೌಡ, ಚರಣ್, ಸಿದ್ದಪ್ಪ, ಮಧುರಾಣಿ, ಇಂದ್ರಾಣಿ, ಮನುಜ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this article