ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ, ಜಯದೇವ, ಕಿದ್ವಾಯಿ, ನಿಮಾನ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಗೆ ಒತ್ತಾಯಿಸಿ, ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಮಿನಿವಿಧಾನ ಸೌಧದ ಮುಂಭಾಗ ಸೋಮವಾರ ಪ್ರತಿಭಟನಾ ಧರಣಿ ನಡೆಯಿತು.
ವಿಚಾರವಾದಿ ಪ್ರೊ. ನರೇಂದ್ರ ನಾಯಕ್, ಸಮುದಾಯ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮನೋಜ್ ವಾಮಂಜೂರು, ಶ್ಯಾಮ್ ಸುಂದರ್, ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ ನಿತಿನ್ ಕುತ್ತಾರ್, ದಲಿತ ಸಂಘಟನೆಯ ಮುಖಂಡ ಕಮಲಾಕ್ಷ ಬಜಾಲ್, ಡಿವೈಎಫ್ಐ ಮುಖಂಡ ಚರಣ್ ಶೆಟ್ಟಿ, ಮಾಧುರಿ ಬೋಳಾರ್ ಮಾತನಾಡಿದರು. ಜಿಲ್ಲಾ ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಸಾಮಾಜಿಕ ಕಾರ್ಯಕರ್ತ ಜೆರಾಲ್ಡ್ ಟವರ್, ರಮೇಶ್ ಉಳ್ಳಾಲ, ಜನವಾದಿ ಮಹಿಳಾ ಸಂಘಟನೆಯ ಭಾರತಿ ಬೋಳಾರ, ಅಸುಂತ ಡಿಸೋಜ, ಯೋಗಿತಾ ಉಳ್ಳಾಲ, ಶಿಳ್ಳೆಕ್ಯಾತ ಅಲೆಮಾರಿ ಸಮುದಾಯ ಸಂಘಟನೆಯ ಮುಖಂಡರಾದ ವೆಂಕಟೇಶ್ ಮತ್ತಿತರರು ಇದ್ದರು.
ಧರಣಿ ಸ್ಥಳಕ್ಕಾಗಮಿಸಿದ ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಜಯ್ ಮನವಿ ಸ್ವೀಕರಿಸಿದರು. ಡಿವೈಎಫ್ಐ ಮಂಗಳೂರು ನಗರ ಅಧ್ಯಕ್ಷ ನವೀನ್ ಕೊಂಚಾಡಿ ಸ್ವಾಗತಿಸಿದರು, ಕಾರ್ಯದರ್ಶಿ ತಯ್ಯೂಬ್ ಬೆಂಗರೆ ನಿರೂಪಿಸಿದರು. ಮಾಧುರಿ ಬೋಳಾರ ವಂದಿಸಿದರು.