ಮಂಗಳೂರು: ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮಾಚರಣೆ, ಜತೆಗೆ ಅಭಿವಂದನಾ ಕಾರ್ಯಕ್ರಮವನ್ನು ಫೆಬ್ರವರಿ 24ರಂದು ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅಭಿವಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
77 ಮಂದಿಗೆ ಸವಲತ್ತು ವಿತರಣೆ: ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ರೂಪಿಸಿ ಮಾರ್ಗದರ್ಶಕರಾಗಿರುವ ಡಾ.ಎಂ.ಎನ್.ಆರ್. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 77 ಮಂದಿ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಲು ತೀರ್ಮಾನಿಸಲಾಗಿದೆ. ಸಹಕಾರ ಕ್ಷೇತ್ರದ ಸರ್ವ ಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲ ವರ್ಗದ ಫಲಾನುಭವಿಗಳನ್ನು ಗುರುತಿಸಿ ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಗಣ್ಯರ ಉಪಸ್ಥಿತಿ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹುಟ್ಟುಹಬ್ಬ ಕಾರ್ಯಕ್ರಮವನ್ನು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ. ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ ಅವರು ಅಭಿವಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ ಎಂದು ಹೇಳಿದರು.ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿವಂದಿಸುವ ಈ ಕಾರ್ಯಕ್ರಮದಲ್ಲಿ ಸಹಕಾರ ಸಂಸ್ಥೆಗಳ ಹೆಚ್ಚಿನ ಪ್ರತಿನಿಧಿಗಳು ಹಾಗೂ ಅವರ ಹಿತೈಷಿಗಳು ಭಾಗವಹಿಸುವಂತೆ ಐಕಳಬಾವ ದೇವಿಪ್ರಸಾದ್ ಶೆಟ್ಟಿ ವಿನಂತಿಸಿದರು.