ಮಂಗಳೂರು: 16ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ

KannadaprabhaNewsNetwork | Published : Nov 11, 2024 11:49 PM

ಸಾರಾಂಶ

ನ.14ರಿಂದ 20ರವರೆಗೆ ನಡೆಯುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.16ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ನ.14ರಿಂದ 20ರವರೆಗೆ ನಡೆಯುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.16ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌, ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ನಡೆಯಲಿದೆ ಎಂದು ತಿಳಿಸಿದರು.

ಸಹಕಾರ ಸಪ್ತಾಹದ ವಸ್ತು ಪ್ರದರ್ಶನ ಮಳಿಗೆಗಳನ್ನು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಫರೀದ್ ನೆರವೇರಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿಯನ್ನು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ. ಶತಮಾನೋತ್ಸವ ಪೂರೈಸಿದ ಸಹಕಾರ ಸಂಘಗಳಿಗೆ ನೀಡಲಾಗುವ ಪುರಸ್ಕಾರವನ್ನು ಮಾಜಿ ಡಿಸಿಎಂ ಲಕ್ಷ್ಮಣ ಸಂಗಪ್ಪ ಸವದಿ ನೆರವೇರಿಸಲಿದ್ದಾರೆ ಎಂದು ಡಾ.ರಾಜೇಂದ್ರ ಕುಮಾರ್‌ ಹೇಳಿದರು.

ಉತ್ತಮ ಸ್ವಸಹಾಯ ಸಂಘಗಳನ್ನು ಶಾಸಕ ಹಾಗೂ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ ಪುರಸ್ಕರಿಸುತ್ತಾರೆ. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ನೆರವೇರಿಸುವರು. ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. “ಸಹಕಾರ ಜಾಥಾ” ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಡಿ. ಕಾಮತ್ ನೆರವೇರಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ., ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಪುತ್ತೂರು ಭಾಗವಹಿಸುವರು. ನಬಾರ್ಡ್ ಬೆಂಗಳೂರು ಮುಖ್ಯ ಮಹಾಪ್ರಬಂಧಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್, ಮಂಗಳೂರು ಮೇಯರ್ ಮನೋಜ್ ಕೋಡಿಕಲ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಗೌರವ ಉಪಸ್ಥಿತರಿರುವರು. ಜತೆಗೆ ವಿವಿಧ ಕ್ಷೇತ್ರಗಳ ಗಣ್ಯರು ವಿಶೇಷ ಆಹ್ವಾನಿತರಾಗಿರುತ್ತಾರೆ ಎಂದು ಹೇಳಿದರು.

ಸಹಕಾರ ಮಾಣಿಕ್ಯ ಪ್ರಶಸ್ತಿ:

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕ್ರೆಡಿಟ್ ಕೋ- ಆಪರೇಟಿವ್ ಸಹಕಾರ ಸಂಘಕ್ಕೆ ಪ್ರಶಸ್ತಿ ನೀಡಲಾಗುವುದು.

ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ, ಅದೇ ರೀತಿ ಹೈನುಗಾರಿಕೆ, ಕ್ರೆಡಿಟ್ ಸೊಸೈಟಿ, ಮೀನುಗಾರ ಸಹಕಾರ ಸಂಘ, ಸೌಹಾರ್ದ ಸಹಕಾರಿ ಸಂಘ, ಮಹಿಳಾ ಸಹಕಾರಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ ಒಂದು ಹಾಗೂ 2023-24ನೇ ಸಾಲಿನಲ್ಲಿ ಶತಮಾನೋತ್ಸವ ಪೂರೈಸಿದ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಗೌರವಿಸಲಾಗುವುದು. ಮೂಡುಬಿದಿರೆ ಸಹಕಾರ ತರಬೇತಿ ಕೇಂದ್ರದಲ್ಲಿ ಪ್ರಥಮ ಹಾಗೂ ದ್ವಿತೀಯ ರ‍್ಯಾಂಕ್ ವಿಜೇತರನ್ನು ಪುರಸ್ಕರಿಸಲಾಗುವುದು ಎಂದು ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದರು.

ಸಹಕಾರ ಜಾಥಾ:

ಸಹಕಾರ ಸಪ್ತಾಹದ ಅಂಗವಾಗಿ ‘ಸಹಕಾರ ಜಾಥಾ’ ಆಯೋಜನೆ ಮಾಡಲಾಗಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಆವರಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಾಂಸ್ಕೃತಿಕ ಕಲಾ ಪ್ರಕಾರಗಳ ಹಾಗೂ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ 30 ವಿವಿಧ ಟ್ಯಾಬ್ಲೋಗಳೊಂದಿಗೆ ನಡೆಯಲಿದೆ ಎಂದರು.ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಉಭಯ ಜಿಲ್ಲೆಗಳ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್. ಮಂಗಳೂರು ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಪಿ.ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಎಸ್. ರಾಜು ಪೂಜಾರಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಇದ್ದರು.

Share this article