ಮಂಗಳೂರು : 73ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನ.20ರಂದು ಬೆಳಗ್ಗೆ 10ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.
‘ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ, ವೃತ್ತಿಪರ ಸೇವೆ’ ಧ್ಯೇಯದೊಂದಿಗೆ, ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು’ ವಿಷಯದೊಂದಿಗೆ ಕಾರ್ಯಕ್ರಮ ನಡೆಯಲಿದೆ. 20ರಂದು ಬೆಳಗ್ಗೆ ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸುವರು.‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಫರೀದ್ ಪ್ರದಾನ ಮಾಡುವರು. ‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ’ವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಅಧ್ಯಕ್ಷ ಜಿ.ಟಿ.ದೇವೇಗೌಡ ನೆರವೇರಿಸುವರು. ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡುವರು. ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆಯನ್ನು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸುವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಹಿಸುವರು ಎಂದರು.ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್, ಶಾಸಕ ಡಾ.ಭರತ್ ಶೆಟ್ಟಿ, ಶಾಸಕ ಹಾಗೂ ದ.ಕ. ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ಮಂಗಳೂರು ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ರವಿರಾಜ್ ಹೆಗ್ಡೆ ಗೌರವ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಕಾರ್ಯದರ್ಶಿ ಎಸ್.ಬಿ.ಶೆಟ್ಟಣ್ಣನವರ್, ಸಹಕಾರ ಸಂಘಗಳ ನಿಬಂಧಕ ವೆಂಕಟೇಶ್ ಎಂ.ವಿ., ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಭಾಗವಹಿಸುವರು ಎಂದರು.
ಪ್ರಶಸ್ತಿ ಪ್ರದಾನ:ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ ೨೦೨೪ನೇ ಸಾಲಿನಿಂದ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭದಲ್ಲಿ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯನ್ನು ನೀಡಲು ನಿರ್ಧರಿಸಲಾಗಿದ್ದು, ಈ ಬಾರಿಯೂ ೨೦೨೫-೨೬ರಲ್ಲಿ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಿ ಆಯ್ಕೆಗೊಂಡ ೪ ಸಹಕಾರಿ ಸಂಘಗಳಿಗೆ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ ಜೊತೆಗೆ 5 ಗ್ರಾಂ ಚಿನ್ನದ ಪದಕ, ೧೦ ಸಾವಿರ ರು. ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು. ರಾಜ್ಯಮಟ್ಟದ ಈ ಕಾರ್ಯಕ್ರಮದಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳು, ಮಹಿಳಾ ಸಹಕಾರಿ ಸಂಘಗಳು, ಹೈನುಗಾರಿಕೆ ಸಹಕಾರಿ ಸಂಘಗಳು, ಮೀನುಗಾರಿಕಾ ಸಹಕಾರಿ ಸಂಘಗಳು, ಕ್ರೆಡಿಟ್ ಸೊಸೈಟಿಗಳು, ಸೌಹಾರ್ದ ಸಹಕಾರಿ ಸಂಘಗಳಿಗೆ ಹಾಗೂ ಟಿಎಪಿಸಿಎಂಎಸ್ ಮತ್ತು ಶತಮಾನೋತ್ಸವ ಪೂರೈಸಿದ ಸಂಘಗಳನ್ನು ‘ಉತ್ತಮ ಸ್ವ-ಸಹಾಯ ಸಂಘ ಪುರಸ್ಕಾರ’ ನೀಡಿ ಗೌರವಿಸಲಾಗುವುದು. ಸಹಕಾರ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ನವೋದಯ ಸ್ವ-ಸಹಾಯ ಗುಂಪುಗಳು ಬಡಜನರ ಆರ್ಥಿಕ ಶಕ್ತಿಯಾಗಿ ಕೆಲಸ ಮಾಡುತ್ತಿವೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು ೩೫,೦೦೦ ಕ್ಕೂ ಅಧಿಕ ನವೋದಯ ಸ್ವ-ಸಹಾಯ ಗುಂಪುಗಳಿದ್ದು, ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಉಭಯ ಜಿಲ್ಲೆಗಳ ಅತ್ಯುತ್ತಮ ಸ್ವ-ಸಹಾಯ ಗುಂಪುಗಳನ್ನು ಪುರಸ್ಕರಿಸಲಾಗುವುದು. ಸಹಕಾರಿ ಸಪ್ತಾಹದ ಸಂದರ್ಭದಲ್ಲಿ ಪ್ರತೀವರ್ಷದಂತೆ ಈ ಬಾರಿಯೂ ಪತ್ರಿಕಾ ರಂಗದಲ್ಲಿ ಒಬ್ಬರನ್ನು ಮತ್ತು ಮೂಡುಬಿದಿರೆ ತರಬೇತಿ ಕೇಂದ್ರದಲ್ಲಿ ರ್ಯಾಂಕ್ ವಿಜೇತ ಇಬ್ಬರನ್ನು ಗುರುತಿಸಿ ಗೌರವಿಸಲಾಗುವುದು ಎಂದರು.