ಕನ್ನಡಪ್ರಭ ವಾರ್ತೆ ಮಂಗಳೂರು ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಅಪರಾಧ ಪತ್ತೆದಳದ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ನರಿಂಗಾನ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಜೀಜ್ ಪೋಕರ್ ಅಜೀಜ್ (42) ಬಂಧಿತ ಆರೋಪಿ. ಈತ ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಯಿಂದ 26 ಗ್ರಾಂ ತೂಕದ 1,30,000 ರು. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್‌ಗಳು 2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 6,41,500 ರು. ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನ ವಿರುದ್ದ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತದೆ. ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಅಲ್ಲಿಯ ಕಾರಾಗೃಹ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ. ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ ಅಗರ್‌ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.