ಮಾವು ಪ್ರದರ್ಶನ, ಮಾರಾಟ ಮೇಳಕ್ಕೆ ಚಾಲನೆ

KannadaprabhaNewsNetwork |  
Published : May 09, 2026, 02:45 AM IST
ಬೆಳಗಾವಿಯಲ್ಲಿ ಮಾವು ಮೇಳಕ್ಕೆ ಐಜಿಪಿ ಚೇತನಸಿಂಗ್‌ ರಾಥೋರ ಚಾಲನೆ ನೀಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಮೂರು ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಚೇತನಸಿಂಗ್ ರಾಥೋಡ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಮೂರು ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಚೇತನಸಿಂಗ್ ರಾಥೋಡ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ಬೆಳಗಾವಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರು ಮೇಳದಲ್ಲಿ ಭಾಗವಹಿಸಿ, ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕು ಹಾಗೂ ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ ರೈತರು ತಮ್ಮ ಮಾವುಗಳನ್ನು ಮಾರಾಟಕ್ಕೆ ಇರಿಸಿದ್ದಾರೆ. ಜೊತೆಗೆ ಮಹಾರಾಷ್ಟ್ರದ ದೇವಗಡ, ಪಂಢರಪುರದಿಂದ ಕೂಡ ರೈತರು ತಮ್ಮ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಆಗಮಿಸಿದ್ದಾರೆ. ಅಲ್ಫಾನ್ಸೋ, ಕೇಸರ್, ಗೋವಾ ಮಂಕೂರ, ಮಲ್ಲಿಕಾ, ಬಿಟ್ಕಿ ಸೇರಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ಸಾರ್ವಜನಿಕರು ನೇರವಾಗಿ ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಸದುಪಯೋಗ ಪಡೆಯುವಂತೆ ತಿಳಿಸಿದರು.

ಮಾವಿನ ಹಣ್ಣುಗಳ ಪ್ರದರ್ಶನ:

ಮಾರಾಟದ ಜೊತೆಗೆ 40 ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಸಾರ್ವಜನಿಕರು ಇವುಗಳನ್ನು ವೀಕ್ಷಿಸುವುದರ ಜೊತೆಗೆ ವಿವಿಧ ತಳಿಯ ಮಾವಿನ ಹಣ್ಣುಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ. ಮೇ.8 ರಿಂದ 10 ರವರೆಗೆ ಮೂರು ದಿನಗಳ ಕಾಲ ಮೇಳ ಜರುಗಲಿದೆ ಎಂದು ಮಾಹಿತಿ ನೀಡಿದರು.

ರೈತರು ಸಾವಯವ ಕೃಷಿ ಕೈಗೊಂಡು ಬೆಳೆದ ಮಾವುಗಳನ್ನು ವಿಶೇಷವಾಗಿ ತೋಟಗಾರಿಕಾ ಇಲಾಖೆಯಿಂದ ಗುರುತಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಮಾರಾಟ ಮಾಡಲು ಅನುಕೂಲವಾಗುತ್ತದೆ. ಜೊತೆಗೆ ಸಾರ್ವಜನಿಕರು ಕೂಡ ಗುಣಮಟ್ಟದ ಮಾವುಗಳನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ (ಒಂದು ಡಜನ್‌ಗೆ ₹ 400 ರಿಂದ ₹ 700 ರವರೆಗೆ) ಖರೀದಿಸಬಹುದಾಗಿದೆ. ಹೀಗಾಗಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮಾವಿನ ಹಣ್ಣುಗಳನ್ನು ಖರೀದಿ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರು ಧರ್ಮದ ಹಾದಿಯಲ್ಲಿ ನಡೆಯಲಿ: ಅಭಿನವ ಸಿದ್ಧಲಿಂಗ ಶ್ರೀ
ದಾನಮ್ಮ ಉತ್ಸವ ದೇಸಿ ಸಂಸ್ಕೃತಿಗೆ ಹಿಡಿದ ಕನ್ನಡಿ: ಎಂ.ಎ.ಮೋರೆ