ಕಾರವಾರ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರಿಗೆ ಸಚಿವ ಸ್ಥಾನ ನೀಡದೇ ಇರುವುದು ಮೀನುಗಾರ ಸಮುದಾಯ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಮಾಡಿರುವ ಅನ್ಯಾಯವಾಗಿದೆ ಎಂದು ಮೀನುಗಾರ ಮುಖಂಡ ಜೈವಿಠ್ಠಲ ಕುಬಾಲ್ ಹೇಳಿದರು.
ಮಂಕಾಳ ವೈದ್ಯ ಅವರ ಹೆಸರನ್ನು ಸಚಿವರ ಪಟ್ಟಿಗೆ ಹೆಸರು ಸೇರಿಸಿ, ಆನಂತರ ಕೈಬಿಟ್ಟಿರುವುದು ಮೀನುಗಾರ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದು, ಸರ್ಕಾರ ಕೂಡಲೇ ಈ ತಪ್ಪನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಜಗದೀಶ ಹರಿಕಾಂತ, ವೈದ್ಯ ಅವರಿಗೆ ಸಚಿವ ಸ್ಥಾನ ನೀಡದೇ ಇರುವುದು ಮೀನುಗಾರ ಸಮುದಾಯಕ್ಕೆ ಮಾಡಿರುವ ಅನ್ಯಾಯವಾಗಿದೆ. ಸರ್ಕಾರ ಈ ನಿರ್ಧಾರವನ್ನು ಪುನರ್‌ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.ಬಾಬು ಕುಬಾಲ್, ಮಂಕಾಳು ವೈದ್ಯರು ಮೀನುಗಾರಿಕೆ ಸಚಿವರಾಗಿದ್ದ ಅವಧಿಯಲ್ಲಿ ಮೀನುಗಾರರ ವಿಮೆ, ಸೀಮೆಎಣ್ಣೆ, ಡೀಸೆಲ್ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದರು. ಮೀನುಗಾರಿಕೆ ಸಂದರ್ಭದಲ್ಲಿ ಮೃತಪಟ್ಟವರಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ₹10 ಲಕ್ಷಕ್ಕೆ ಹೆಚ್ಚಿಸಿದ್ದರು. ಇಂತಹ ನಾಯಕನಿಗೆ ಸಚಿವ ಸ್ಥಾನ ನಿರಾಕರಿಸಿರುವುದನ್ನು ಕರಾವಳಿ ಭಾಗದ ಮೀನುಗಾರರು ಪಕ್ಷಾತೀತವಾಗಿ ಖಂಡಿಸುತ್ತಿದ್ದಾರೆ ಎಂದರು.