ಕನ್ನಡಪ್ರಭ ವಾರ್ತೆ ಮಡಿಕೇರಿ
ಹೆಚ್ಚಿನ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲ್ಲಿನ ನಾಗರಿಕರು ಸಹ ಹೆಚ್ಚಿನ ಜಾಗೃತಿ ವಹಿಸಬೇಕಿದೆ ಎಂದು ಶಾಸಕರು ಮನವಿ ಮಾಡಿದರು. ಸ್ಥಳೀಯರ ಕುಂದುಕೊರತೆಯನ್ನು ಇದೇ ಸಂದರ್ಭದಲ್ಲಿ ಶಾಸಕರು ಆಲಿಸಿದರು.ನಗರದ ಸ್ಟೀವರ್ಟ್ ಹಿಲ್ ಬಳಿಯಿರುವ ತ್ಯಾಜ್ಯ ಘಟಕ ಸ್ಥಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ವೀಕ್ಷಿಸಿದರು. ಜಾಗ ಸಂಬಂಧ ಹೈಕೋರ್ಟ್ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಬದಲಿ ಜಾಗ ಗುರುತಿಸುವಂತೆ ಕಂದಾಯ ಹಾಗೂ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳ ಅಹವಾಲು ಆಲಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ವಿದ್ಯಾರ್ಥಿ ನಿಲಯದಲ್ಲಿ ಶುಚಿತ್ವ ಕಾಪಾಡಬೇಕು. ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಇತರರು ಇದ್ದರು.
ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು. ತಮ್ಮ ಅಹವಾಲುಗಳನ್ನು ಆದಷ್ಟು ಶೀಘ್ರ ಪರಿಹರಿಸಲಾಗುವುದು ಎಂದು ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದರು.
ಪ್ರಸಕ್ತ ಸಾಲಿನ ಆಯವ್ಯಯ ಭಾಷಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ ತಲಾ 100 ಸಂಖ್ಯಾಬಲದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ 150 ಹೊಸ ವಿದ್ಯಾರ್ಥಿ ನಿಲಯ ಮಂಜೂರು ಮಾಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರ ಪ್ರಯತ್ನದಿಂದ ಕೊಡಗು ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.