ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರದಿಂದ ಹಲವು ಯೋಜನೆಗಳು: ಭಾಸ್ಕರ್

KannadaprabhaNewsNetwork | Published : May 23, 2024 1:06 AM

ಸಾರಾಂಶ

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಮಧ್ಯಾಹ್ನದ ಬಿಸಿ ಊಟ, ಹಾಲು, ಮೊಟ್ಟೆ, ಶೂ ಹಾಗೂ ಸಾಕ್ಸ್, ಪಠ್ಯಪುಸ್ತಕಗಳು ಮತ್ತು ಸಮವಸ್ತ್ರ ಸೇರಿದಂತೆ ಇತರ ಸೌಲಭ್ಯಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸೇರಿಸಿ ಸೌಲಭ್ಯ ಪಡೆದುಕೊಳ್ಳಬೇಕು.

ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ

ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆ ಹಮ್ಮಿಕೊಂಡಿದೆ ಎಂದು ಕಂದಾಯ ನಿರೀಕ್ಷಕ ಭಾಸ್ಕರ್ ಹೇಳಿದರು.

ತಾಲೂಕಿನ ನೆಲಮನೆ ಶಾಲಾ ಆವರಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ, ಬೆಂಗಳೂರಿನ ಸುಕೃತ ಸಂಸ್ಥೆ ಹಾಗೂ ಬಲ್ಲೇನಹಳ್ಳಿ ಡಿಜಿಟಲ್ ಗ್ರಂಥಾಲಯ ಹಾಗೂ ಅರಿವು ಕೇಂದ್ರದಿಂದ ಆಯೋಜಿಸಿದ್ದ ಚೈತ್ರದ ಚಿಗುರು ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಶಾಲಾ ವಿಶೇಷ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಬೆಂಗಳೂರಿನ ಸುಕೃತಾ ಸಂಸ್ಥೆಯವರು ಆಧುನಿಕ ಉಪಕರಣದ ಮೂಲಕ ಡಿಜಿಟಲ್ ತರಗತಿಗೆ ಬೇಕಾದ ವ್ಯವಸ್ಥೆ ಕಲ್ಪಿಸಿರುವುದು ಉತ್ತಮ ಬೆಳವಣಿಗೆ ಎಂದರು.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಮಧ್ಯಾಹ್ನದ ಬಿಸಿ ಊಟ, ಹಾಲು, ಮೊಟ್ಟೆ, ಶೂ ಹಾಗೂ ಸಾಕ್ಸ್, ಪಠ್ಯಪುಸ್ತಕಗಳು ಮತ್ತು ಸಮವಸ್ತ್ರ ಸೇರಿದಂತೆ ಇತರ ಸೌಲಭ್ಯಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ ಎಂದರು.

ಪೋಷಕರು ತಮ್ಮ ಮಕ್ಕಳನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸೇರಿಸಿ ಸೌಲಭ್ಯ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕಂದಾಯ ಇಲಾಖೆಯಿಂದ ಅಧಿಕಾರಿಗಳ ಶಾಲೆಗೆ ಆಗಮಿಸಿ, ಜಾತಿ ಮತ್ತು ಆದಾಯ ಧೃಡೀಕರಣ ಪತ್ರವನ್ನು ನೀಡುವ ಆಂದೋಲನ ಮಾಡುವ ಗುರಿ ಹೊಂದಿದ್ದೇವೆ ಎಂದರು.

ಮುಖ್ಯ ಶಿಕ್ಷಕ ಕೃಷ್ಣಪ್ಪ ಮಾತನಾಡಿ, ನಮ್ಮಲ್ಲಿ ನುರಿತ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣಕ್ಕೆ ಹಾಗೂ ಪಠ್ಯೇತರ ಚಟುವಟಿಕೆ, ಕ್ರೀಡಾ ಚಟುವಟಿಕೆ ಸೇರಿದಂತೆ ಇತರೆ ಪ್ರತಿಭಾವಂತ ಮಕ್ಕಳನ್ನ ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವಂತಹ ವಾರ್ಷಿಕ ಯೋಜನೆಯನ್ನು ರೂಪಿಸಿಕೊಂಡಿದ್ದೇವೆ. ಪೋಷಕರು ಮತ್ತು ಗ್ರಾಮಸ್ಥರು ಸರ್ಕಾರಿ ಶಾಲೆಯನ್ನು ಉಳಿಸಲು ಸಹಕಾರ ನೀಡಬೇಕೆಂದು ಕೋರಿದರು.

ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ, ಸೇರಿಸಿ ಸೇರಿಸಿ ಸರ್ಕಾರಿ ಶಾಲೆಗೆ ಸೇರಿಸಿ, ಎಂಬ ಘೋಷಣೆಯೊಂದಿಗೆ ಜಾಗೃತಿ ಮೂಡಿಸಿದರು. ಈ ವೇಳೆ ಶಿಕ್ಷಕರಾದ ಸಾಗರ್, ಲಕ್ಷ್ಮಿ, ಸವಿತಾ, ಎಸ್‌ಡಿಎಂಸಿ ಸದಸ್ಯ ರಘು, ಹಿರಿಯರಾದ ಮರಿಸ್ವಾಮಿಗೌಡ, ಗ್ರಂಥಪಾಲಕ ಕೂಡಲಕುಪ್ಪೆ ಸೋಮಶೇಖರ್ ಸೇರಿದಂತೆ ಇತರರು ಇದ್ದರು.

Share this article