ಜ.೬ರಿಂದ ಈಡಿಗರ ಬೇಡಿಕೆಗಳ ಈಡೇರಿಕೆಗಾಗಿ ಪಾದಯಾತ್ರೆ

KannadaprabhaNewsNetwork |  
Published : Dec 19, 2025, 01:30 AM IST
೧೮ಶಿರಾ೧: ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಸಾಮಾಜಿಕ ನ್ಯಾಯಕ್ಕೆ ತಿಲಾಂಜಲಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಚಿತ್ತಾಪುರ ತಾಲ್ಲೂಕಿನ ಕರಗಲ್ಲು ಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಶಿರಾ

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಸಾಮಾಜಿಕ ನ್ಯಾಯಕ್ಕೆ ತಿಲಾಂಜಲಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಚಿತ್ತಾಪುರ ತಾಲ್ಲೂಕಿನ ಕರಗಲ್ಲು ಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದರು.

ಅವರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಈಡಿಗ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸೇರಿದಂತೆ ಜನಾಂಗದ ೧೮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.೬ರಂದು ನಾರಾಯಣಗುರು ಶಕ್ತಿಪೀಠದಿಂದ ಪಾದಯಾತ್ರೆ ಆರಂಭವಾಗಲಿದೆ. ಈಡಿಗ ಸಮುದಾಯ ಪ್ರಸ್ತುತ ೨ಎ ನಲ್ಲಿ ಇದ್ದು, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದರು ಸಹ ಮೀಸಲಾತಿಗೆ ಪರಿಗಣಿಸದಿರುವುದು ನೋವಿನ ಸಂಗತಿಯಾಗಿದೆ. ಮೂರು ವರ್ಷಗಳ ಹಿಂದೆ ಮಂಗಳೂರಿನಿಂದ ಬೆಂಗಳೂರುವರೆಗೆ ೬೫೮ ಕಿ.ಮೀ ಪಾದಯಾತ್ರೆ ಮಾಡಿದ ಸಮಯದಲ್ಲಿ ಅಂದು ಅಧಿಕಾರದಲ್ಲಿ ಇದ್ದ ಬಿಜೆಪಿ ಸರಕಾರ ಕೆಲವು ಬೇಡಿಕೆಗಳನ್ನು ಈಡೇರಿಸಿದೆ. ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಚುನಾವಣೆ ಸಮಯದಲ್ಲಿ ಜನಾಂಗಕ್ಕೆ ನೀಡಿದ್ದ ಆಶ್ವಾಸನೆಗಳನ್ನು ಮರೆತು ಕುಳಿತಿದ್ದು ಅದನ್ನು ಎಚ್ಚರಿಸುವ ದೃಷ್ಟಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.

ಈಡಿಗರ ಕುಲ ಕಸುಬಾದ ಸೇಂದಿ ಮಾರಾಟವನ್ನು ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಲಾಗಿದೆ. ಇದರಿಂದ ಜನಾಂಗ ಆರ್ಥಿಕವಾಗಿ ಸಂಕಷ್ಟ ಅನುಭವಿಸುವಂತಾಗಿದೆ. ಕುಲಕಸಬು ಕಳೆದುಕೊಂಡ ಕುಟುಂಬಗಳಿಗೆ ೫ ಎಕರೆ ಜಮೀನು ಮಂಜೂರು ಮಾಡಬೇಕು ಹಾಗೂ ಆಂದ್ರ ಪ್ರದೇಶ ಹಾಗೂ ತೆಲಂಗಾಣ ಮಾದರಿಯಲ್ಲಿ ಮದ್ಯ ಮಾರಾಟದಲ್ಲಿ ಈಡಿಗ ಜನಾಂಗದವರಿಗೆ ಶೇ.೫೦ ರಷ್ಟು ಮೀಸಲು ನೀಡಬೇಕು ಎಂದು ಒತ್ತಾಯಿಸಿದರು. ನಾರಾಯಣ ಗುರು ಅವರ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಮುಂದೆ ಪ್ರತಿಷ್ಠಾಪಿಸಬೇಕು. ಈಡಿಗರು ಹಾಗೂ ಹಿಂದುಳಿದವರ ಭಕ್ತಿ ಶ್ರದ್ಧಾ ಕೇಂದ್ರವಾದ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ವಿರುದ್ದ ಹೂಡಿರುವ ಮೊಕದ್ದಮೆಗಳನ್ನು ವಾಪಸ್ಸು ಪಡೆಯಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಎಸ್ ಸಿ ಮಾಜಿ ಸದಸ್ಯ ಲಕ್ಷ್ಮಿನರಸಯ್ಯ, ರಾಷ್ಟ್ರೀಯ ಈಡಿಗ ಮಹಾಮಂಡಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತರಾಜು, ಎ.ಸುರೇಶ್, ರಾಜಣ್ಣ, ವೆಂಕಟಶ್ವಾಮಯ್ಯ, ಶ್ರೀನಿವಾಸ್ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು