ಕನ್ನಡಪ್ರಭ ವಾರ್ತೆ ಮೈಸೂರು ಪ್ರಚಾರ
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ, ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ವಿಧಾನಪರಿಷತ್ತು ಮಾಜಿ ಸದಸ್ಯ ಮರಿತಿಬ್ಬೇಗೌಡ ಮನವಿ ಮಾಡಿದರು.ಮುಖ್ಯಮಂತ್ರಿಗ ಸಿದ್ದರಾಮಯ್ಯ ಅವರು ಮೊದಲನೆ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಎರಡನೇ ಬಾರಿಗೆ 10 ತಿಂಗಳ ಅವಧಿಯಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದಾರೆ. ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.2024- 25ನೇ ಸಾಲಿನ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 53 ಸಾವಿರ ಕೋಟಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ 89 ಸಾವಿರ ಕೋಟಿ ನಿಗಧಿಗೊಳಿಸಿದೆ. ಆದರೆ, 5 ಗ್ಯಾರಂಟಿಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ವಿರೋಧಿಸುತ್ತಿರುವುದು ಸರಿಯಿಲ್ಲ ಎಂದು ಅವರು ಕಿಡಿಕಾರಿದರು.ಈ ಹಿಂದೆ ಸದನದಲ್ಲಿ ಮಹಾರಾಣಿ ಕಾಲೇಜು ಕುಸಿದ್ದಂತಹ ವಿಚಾರವನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪ ಮಾಡಿದ್ದು ಮಹಿಳಾ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದಂತೆ ಅನುದಾನ ಬಿಡುಗಡೆ ಮಾಡುವಂತಹ ಕೆಲಸವನ್ನು ಮಾಡಿರುವುದು ವಿಶೇಷವಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡುತ್ತಿರುವವರು ತಾವು ಕೂಡ ಫಲಾನುಭವಿಗಳು ಆಗಿರುವುದನ್ನು ಮರೆಯಬಾರದು ಎಂದು ಅವರು ಕುಟುಕಿದರು.ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಈ ಬಾರಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ರಾಷ್ಟ್ರದ ಮತದಾರ ಬಂಧುಗಳಿಗೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖರ್ಗೆ, ರಾಹುಲ್ ಗಾಂಧಿ ಸೂಚನೆಯ ಮೇರೆಗೆ ಕನ್ನಡ ನಾಡಿನಲ್ಲಿ ಎಲ್ಲಾ ವರ್ಗದ ಪ್ರತಿಯೊಂದು ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳನ್ನು 8 ತಿಂಗಳಲ್ಲಿ ಅನುಷ್ಠಾನಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದರು.ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ತತ್ವಸಿದ್ಧಾಂತಗಳ ಆಧಾರದ ಮೇಲೆ ರೂಪಿತವಾದ ಸಂವಿಧಾನದ ಸದಾಶಯದಂತೆ ಎಲ್ಲಾ ಸಮುದಾಯದ ಪ್ರತಿ ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಎಂ. ಲಕ್ಷಣ ಮತ್ತು ಸುನಿಲ್ ಬೋಸ್ ಅವರಿಗೆ ಮತ ನೀಡಬೇಕು ಎಂದು ಅವರು ಮನವಿ ಮಾಡಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ. ರಾಮು ಇದ್ದರು.----ಬಾಕ್ಸ್... ಎನ್. ಮಹೇಶ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರುಕೊಳ್ಳೇಗಾಲದ ಮಾಜಿ ಶಾಸಕ ಎನ್. ಮಹೇಶ್ ಅವರು ಎಲ್ಲರೂ ಮಲಗಿರುವ ರಾತ್ರಿ ವೇಳೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಅಲ್ಲಿನ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ತಿಳಿಸಿದರು.ಪ್ರಚಾರ ವೇಳೆ ಎನ್. ಮಹೇಶ್ ಅವರು ಆಕ್ಷೇಪಾರ್ಹ ಪದ ಬಳಸುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವೂ ಆಗಿದೆ. ಹೀಗಾಗಿ, ಅವರು ಇಲ್ಲಿ ಮಾತ್ರವಲ್ಲ, ರಾಜ್ಯದ ಯಾವುದೇ ಭಾಗದಲ್ಲಿಯೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ನಿರ್ಬಂಧ ವಿಧಿಸಬೇಕು. ಸಮುದಾಯವೊಂದರ ವಿರುದ್ಧ ನೀಡಿದ ಹೇಳಿಕೆಗಾಗಿ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೋರಲಾಗಿದೆ ಎಂದರು.