ಕನ್ನಡಪ್ರಭ ವಾರ್ತೆ ಪುತ್ತೂರು
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿ ಮಾಡಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ. ರಾವ್‌ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿ ಪುತ್ತೂರಿಗೆ ಕರೆ ತಂದಿದ್ದಾರೆ. ಬಂಧಿತ ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ. ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು, ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ, ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀಕೃಷ್ಣ ಜೆ. ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರಂಭದಲ್ಲಿ ಜೂ.೧೧ಕ್ಕೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ತನ್ನ ವಿರುದ್ಧ ದೂರು ದಾಖಲಾಗುತ್ತಲೇ ಆರೋಪಿ ಶ್ರೀಕೃಷ್ಣ ಜೆ.ರಾವ್ ನಾಪತ್ತೆಯಾಗಿದ್ದು, ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಆರೋಪಿಯ ಬಂಧನಕ್ಕೆ ವ್ಯಾಪಕ ಆಗ್ರಹ ವ್ಯಕ್ತವಾಗಿ ಪ್ರತಿಭಟನೆ, ಮನವಿ ಸಲ್ಲಿಕೆ ನಡೆದಿತ್ತು. ಸಂತ್ರಸ್ತೆಯ ಮನೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಸಂತ್ರಸ್ತೆಯ ಭೇಟಿ ನೀಡಿದ್ದರು. ಆರೋಪಿಯ ಬಂಧನಕ್ಕೆ ಪೊಲೀಸರ ಮೇಲೆ ಒತ್ತಡ ಹೆಚ್ಚಾಗತೊಡಗಿತು. ಎಚ್ಚೆತ್ತ ಪೊಲೀಸರು ಆರೋಪಿಯನ್ನು ಬಂಧಿಸಿ ಕರೆ ತರುವ ನಿಟ್ಟಿನಲ್ಲಿ ವಿಶೇಷ ತಂಡ ರಚನೆ ಮಾಡಿ ಹುಡುಕಾಟ ಮುಂದುವರಿಸಿದ್ದರು.ಬಂಧಿತ ಆರೋಪಿಯನ್ನು ಆರೋಗ್ಯ ತಪಾಸಣೆಗಾಗಿ ಶನಿವಾರ ಮಧ್ಯಾಹ್ನ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆತನ ವಿರುದ್ದ ದ.ಕ. ಜಿಲ್ಲಾ ಮಹಿಳಾ ಠಾಣೆಯಲ್ಲಿ ಅ.ಕ್ರ ೧೯/೨೦೨೫ಕಲಂ ೬೪(೧), ೬೯ ಬಿಎನ್‌ಎಸ್ ೨೦೨೩ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಆರೋಪಿಗೆ ಸಹಕಾರ: ತಂದೆ ಬಂಧನ
ಮದುವೆಯಾಗುವುದಾಗಿ ನಂಬಿಸಿ ಬಳಿಕ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕೃಷ್ಣ ರಾವ್ ಪರಾರಿಯಾಗಲು ಸಹಕಾರ ನೀಡಿದ ಆರೋಪದಲ್ಲಿ ಆತನ ತಂದೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ನಗರ ಪೊಲೀಸರು ಅವರನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ನ್ಯಾಯಾಲಯವು ಜಗನ್ನಿವಾಸ್ ರಾವ್‌ಗೆ ಜಾಮೀನು ಹಾಗೂ ಶ್ರೀಕೃಷ್ಣ ರಾವ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ.