ಅರ್ಹರಿಗೆ ತಪ್ಪದೆ ಔಷಧಿ ನುಂಗಿಸಿ । 10ರಿಂದ 28ರ ವರೆಗೆ ಆಯೋಜನೆ
ಕನ್ನಡಪ್ರಭ ವಾರ್ತೆ ಯಾದಗಿರಿ
ಆನೆಕಾಲು ರೋಗ ನಿವಾರಣೆಗಾಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಫೆ.10 ರಿಂದ 28 ರವರೆಗೆ ಜಿಲ್ಲೆಯ ವಡಗೇರಾ ಬ್ಲಾಕ್‌ನಲ್ಲಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆನೆಕಾಲು ರೋಗ ನಿವಾರಣೆಗೆ ವಡಗೇರಾ ಬ್ಲಾಕಿನಲ್ಲಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಅತೀ ಅಪಾಯವುಳ್ಳ ಗ್ರಾಮಗಳಲ್ಲಿ ಯೋಜನಾಬದ್ಧವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅಂಕಿ-ಅಂಶಗಳ ಮೇಲೆ ಅಷ್ಟೇ ಅಲ್ಲದೇ ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ಹಿಸಬೇಕು. ಅರ್ಹರು ಗುಳಿಗೆ ನುಂಗಲು ನಿರಾಕರಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ. ಎಂ.ಎ. ಸಾಜೀದ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಡಿವೈಎಸ್ಪಿ ಅರುಣಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೇಶ್ ಬಿರಾದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.