ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೆ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಮಹಿಳಾ ಎಸ್‌ಸಿಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ ಯೋಗೇಶ್ವರ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.
ಚನ್ನಪಟ್ಟಣ: ಮಾಜಿ ಸಚಿವ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೆ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಮಹಿಳಾ ಎಸ್‌ಸಿಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ ಯೋಗೇಶ್ವರ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಪಂ ಮಾಜಿ ಸದಸ್ಯ ಸದಾನಂದ, ಯೋಗೇಶ್ವರ್ ಎಲ್ಲಿರುತ್ತಾರೋ ನಾವು ಅಲ್ಲಿರುತ್ತೇವೆ. ಯೋಗೇಶ್ವರ್ ಅವರನ್ನು ಬೆಂಬಲಿಸಿ ಬಿಜೆಪಿ ಎಸ್ಸಿಎಸ್ಟಿ ತಾಲೂಕು ಘಟಕದ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಎನ್‌ಡಿಎ ಟಿಕೆಟ್‌ಗಾಗಿ ಗೊಂದಲ ಮೂಡಿದ್ದ ಸಂದರ್ಭದಲ್ಲೇ ನಾವು ಯೋಗೇಶ್ವರ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದೆವು. ಈಗ ಅದರಂತೆ ನಡೆದುಕೊಂಡಿದ್ದು, ಬಿಜೆಪಿಗೆ ರಾಜೀನಾಮೆ ಸಲ್ಲಿಸಲಾಗಿದೆ. ಇನ್ನು ಮುಂದೆ ನಾವು ಯೋಗೇಶ್ವರ್ ಅವರನ್ನು ಬೆಂಬಲಿಸುವುದಾಗಿ ತಿಳಿಸಿದರು.
ಈ ಹಿಂದೆ ಕ್ಷೇತ್ರದ ಶಾಸಕರಾಗಿದ್ದವರು ಕಳೆದ ಆರು ವರ್ಷಗಳಿಂದ ಯಾರ ಕೈಗೂ ಸಿಗುತ್ತಿರಲಿಲ್ಲ. ತಾಲೂಕಿನ ಅಭಿವೃದ್ಧಿಗಾಗಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ದೃಷ್ಟಿಯಿಂದ ನಾವು ಸಹ ಯೋಗೇಶ್ವರ್ ಅವರಿಗೆ ಸಹಕಾರ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಯೋಗೇಶ್ವರ್ ಬೆಂಬಲಿಸುವವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಬಿಜೆಪಿ ಜಿಲ್ಲಾಧ್ಯಕ್ಷರ ಆದೇಶಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಈಗಾಗಲೇ ವಾಟ್ಸಾಪ್ ಮೂಲಕ ರಾಜೀನಾಮೆ ಸಲ್ಲಿಸಿದ್ದೇವೆ. ಇದನ್ನು ನೋಡಿದ ಅವರು ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ನಾವೇ ಪಕ್ಷದಿಂದ ಹೊರಬಂದಿದ್ದೇವೆ, ಅವರೇನು ನಮ್ಮನ್ನು ಉಚ್ಛಾಟನೆ ಮಾಡುವುದು ಎಂದು ಪ್ರಶ್ನಿಸಿದರು.
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದ ನಂತರ ಬಿಜೆಪಿ ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದಿಂದ ಯಾರೂ ನಮ್ಮನ್ನು ಸಂಪರ್ಕಿಸುವ ಪ್ರಯತ್ನವನ್ನೇ ಮಾಡಲಿಲ್ಲ. ಅವರಿಗೆ ತಾಲೂಕು ಎಸ್‌ಸಿಎಸ್‌ಟಿ ಘಟಕದ ಪದಾಧಿಕಾರಿಗಳು ಯಾರು ಎಂಬುದೇ ಗೊತ್ತಿಲ್ಲ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವೆಂಕಟೇಶ್‌ಮೂರ್ತಿ, ಗೋಪಿನಾಥ್, ಶಿವಲಿಂಗಯ್ಯ, ಕಿಚ್ಚ, ಶಿವಶಂಕರ್, ನರಸಿಂಗಯ್ಯ, ತನುಜಾ ಇತರರಿದ್ದರು.
ಸಿಪಿವೈ ಬೆಂಬಲಿತರ ಉಚ್ಛಾಟನೆ
ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಜತೆ ಕಾಂಗ್ರೆಸ್‌ಗೆ ಹೋಗಿರುವವರನ್ನು ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್.ಆನಂದಸ್ವಾಮಿ ಆದೇಶ ಹೊರಡಿಸಿದ್ದಾರೆ. ಸಿ.ಪಿ.ಯೋಗೇಶ್ವರ್ ಅವರೊಡನೆ ಗುರುತಿಸಿಕೊಂಡಿರುವವರು ಹಾಗೂ ಅವರೊಂದಿಗೆ ಕಾಂಗ್ರೆಸ್‌ಗೆ ಹೋಗಿರುವ ಬಿಜೆಪಿ ಪದಾಧಿಕಾರಿಗಳನ್ನು ತಕ್ಷಣದಿಂದಲೇ ಉಚ್ಛಾಟನೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಪೊಟೋ೨೭ಸಿಪಿಟಿ೧: ಚನ್ನಪಟ್ಟಣದಲ್ಲಿ ಬಿಜೆಪಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿರುವ ಎಸ್‌ಸಿಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.