ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಡಿಸೆಂಬರ್ 2ರವರೆಗೆ ಹಮ್ಮಿಕೊಂಡಿರುವ 8ನೇ ಸುತ್ತಿನ ಕಾಲುಬಾಯಿ ರೋಗದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಾಲನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಾನುವಾರುಗೆ ಪೂಜೆ ಸಲ್ಲಿಸಿ ಅಕ್ಕಿ ಬೆಲ್ಲ ತಿನ್ನಿಸಿದ ನಂತರ ಮಾತನಾಡಿದ ಅವರು, ರೈತರು ತಮ್ಮ ಮನೆ ಬಾಗಿಲಿಗೆ ಬರುವ ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸಿ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ವಿರುದ್ಧದ ಲಸಿಕೆಯನ್ನು ಹಾಕಿಸುವಂತೆ ಸಲಹೆ ನೀಡಿದರು. ಪ್ರತಿಯೊಬ್ಬ ರೈತರು ಸಹ ಜಾನುವಾರುಗಳಿಗೆ ಈ ಲಸಿಕೆಯನ್ನು ಹಾಕಿಸುವ ಮೂಲಕ ತುಮಕೂರು ಜಿಲ್ಲೆಯನ್ನು ಕಾಲುಬಾಯಿ ಜ್ವರ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಅವರು ಹೇಳಿದರು. ಅಭಿಯಾನದಲ್ಲಿ ಪ್ರತಿಯೊಂದು ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಬೇಕು. ಲಸಿಕಾ ಕರ್ತವ್ಯದಲ್ಲಿ ಯಾವುದೇ ರೀತಿಯ ಅಸಡ್ಡೆ ಅಥವಾ ನಿರ್ಲಕ್ಷ್ಯ ತೋರಬಾರದು ಎಂದರು.
ಕಾಲುಬಾಯಿ ಜ್ವರದಂತಹ ಸಾಂಕ್ರಾಮಿಕ ರೋಗದಿಂದ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗಳು ಈ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಪ್ರಸಾದ್ ಮಾತನಾಡಿ ಲಸಿಕೆಯನ್ನು ಉಚಿತವಾಗಿ ಹಾಕಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿಗಣೇಶ್, ಸಿ.ಬಿ. ಸುರೇಶ್‌ಬಾಬು, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಓ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಹಾಗೂ ಪಶುಪಾಲನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.