ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್‌ ಪ್ರತಿಭಟನೆ

KannadaprabhaNewsNetwork |  
Published : Sep 12, 2026, 02:45 AM IST
ಚಿತ್ರ : ರೈತರಿಂದ ಮಡಿಕೇರಿಯಲ್ಲಿ ನಡೆದ ಬೃಹತ್ ಪ್ರತಿಭಟನೆ.  | Kannada Prabha

ಸಾರಾಂಶ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಸೆಕ್ಷನ್ 4 ಮತ್ತು ಸಿ ಅಂಡ್ ಡಿ ಲ್ಯಾಂಡ್ ವರದಿ ವಿರೋಧಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಸೇರಿದಂದ ವಿವಿಧ ಸಂಘಟನೆಗಳಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.

ಮಡಿಕೇರಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಸೆಕ್ಷನ್ 4 ಮತ್ತು ಸಿ ಅಂಡ್ ಡಿ ಲ್ಯಾಂಡ್ ವರದಿ ವಿರೋಧಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಸೇರಿದಂದ ವಿವಿಧ ಸಂಘಟನೆಗಳಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಶಾಸಕರು ಸೇರಿದಂತೆ ವಿವಿಧ ಪಕ್ಷದ ಮುಖಂಡರು ಪಕ್ಷತೀತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಸ್ತೂರಿರಂಗನ್ ವರದಿ ಜಾರಿಯಾದರೆ ಕೊಡಗಿನ ರೈತರು, ಕಾಫಿ ಬೆಳೆಗಾರರು ಹಾಗೂ ಗ್ರಾಮೀಣ ಭಾಗದ ಜನರಿಗೆ ತೊಂದರೆಯಾಗಲಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಕಸ್ತೂರಿರಂಗನ್ ವರದಿ ಜಾರಿಗೊಳಿಸಬಾರದು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಪ್ರತಿಭಟನೆಯ ಕಾವು ಮತ್ತಷ್ಟು ಹೆಚ್ಚಾದಂತೆ ರೈತರು ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ವಾಹನ ಸಂಚಾರ ತಡೆದರು. ಇದರಿಂದ ಮಂಗಳೂರು, ಮೈಸೂರು ಹಾಗೂ ಹಾಸನ ಭಾಗಗಳಿಗೆ ತೆರಳಬೇಕಿದ್ದ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಪರಿಣಾಮ, ರಸ್ತೆಯಲ್ಲಿ ವಾಹನಗಳ ಸಾಲು ಕಂಡುಬಂತು. ಪ್ರಯಾಣಿಕರು ಹಾಗೂ ವಾಹನ ಸವಾರರು ತಮ್ಮ ವಾಹನಗಳಲ್ಲೇ ಕುಳಿತು ಸಂಚಾರ ಆರಂಭವಾಗುವುದಕ್ಕಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಪೊಲೀಸರ ಹರಸಾಹಸ: ಏಕಾಏಕಿ ರಸ್ತೆ ತಡೆ ನಡೆದ ಹಿನ್ನೆಲೆ ಆರಂಭದಲ್ಲಿ ಪೊಲೀಸರು ಕೂಡ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಬಳಿಕ ಜಿಲ್ಲಾಧಿಕಾರಿ ಸೋಮಶೇಖರ್, ಕೊಡಗು ಎಸ್‌ಪಿ ಬಿಂದುಮಣಿ, ಶಾಸಕ ಮಂತರ್ ಗೌಡ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ರೈತರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಲಾಯಿತು. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸುತ್ತಿದ್ದಂತೆ, ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪರಿಸರ ರಕ್ಷಣೆ ಹೆಸರಲ್ಲಿ ಕೃಷಿಗೆ ಅಡ್ಡಿ

ಕಸ್ತೂರಿರಂಗನ್ ವರದಿ ಜಾರಿಯಾದರೆ ಕೊಡಗಿನ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಎದುರಾಗಬಹುದು ಎಂಬ ಆತಂಕವನ್ನು ರೈತರು ವ್ಯಕ್ತಪಡಿಸಿದರು. ಕೊಡಗಿನ ನೆಲ, ಜಲ, ಕೃಷಿ ಹಾಗೂ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಸೋಮಶೇಖರ್ ಮಾತನಾಡಿ, ಇನ್ನೊಂದು ವಾರದೊಳಗೆ ಗ್ರಾಮೀಣ ಭಾಗದಲ್ಲಿ ವಿಶೇಷ ಸಭೆಗಳನ್ನು ನಡೆಸಿ, ಕಸ್ತೂರಿರಂಗನ್ ವರದಿ ಕುರಿತು ಜನರ ಅಭಿಪ್ರಾಯವನ್ನು ಸಂಗ್ರಹಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.

ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ. ಸುರೇಶ್, ಮುಖಂಡರಾದ ದೀಪಕ್, ಸುರೇಶ್ ಚಕ್ರವರ್ತಿ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಎಂ.ಎಲ್.ಸಿ ಎಸ್.ಜಿ. ಮೇದಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

((ಬಾಕ್ಸ್‌)

ನಾವು ರೈತರ ಪರ ಇದ್ದೇವೆ : ಮಂತರ್ ಗೌಡ

ರೈತರ ವರದಿಗಳ ವಿರುದ್ಧ ನಾವು ಸದಾ ಹೋರಾಡುತ್ತೇವೆಂದು ಶಾಸಕ ಡಾ. ಮಂತರ್ ಗೌಡ ಹೇಳಿದರು. ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯಿಂದ ನಡೆದ ಪ್ರತಿಭಟನೆಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ರೈತರು, ಜನರಿಗೆ ವಿವಿಧ ಕಾಯಿದೆಗಳು, ವರದಿಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಸ್ತೂರಿ ರಂಗನ್ ವರದಿಯಿಂದ ರೈತರಲ್ಲಿ ಆತಂಕ ಮೂಡಿದ್ದು, ಇಡೀ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಈ ಸಂದರ್ಭ ಮುಂದಿನ ದಿನಗಳಲ್ಲಿ ವಿಶೇಷ ಅಧಿವೇಶನವನ್ನು ಕರೆಯಲಾಗಿದ್ದು, ಈ ವರದಿಯನ್ನು ತಿರಸ್ಕರಿಸಿ ನಿರ್ಣಯ ತೆಗೆದುಕೊಂಡು ವರದಿಯನ್ನು ಕೇಂದ್ರಕ್ಕೆ ಕಳುಹಿಸಲಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 53 ಗ್ರಾಮಗಳು ಗುರುತಿಸಿದ್ದು, ಇದನ್ನು ತಿರಸ್ಕಾರ ಮಾಡಬೇಕೆಂದು ನಾವು ಒತ್ತಾಯಿಸಿದ್ದೇವೆ. ಅರಣ್ಯ ರಕ್ಷಣೆ ಮಾಡುವುದರೊಂದಿಗೆ ರೈತರ ಬದುಕನ್ನು ರಕ್ಷಣೆ ಮಾಡಬೇಕೆಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಜನಜೀವನ ಅಭಿವೃದ್ಧಿ: ರಾಬಿನ್ ದೇವಯ್ಯ
ರಾಮಕೃಷ್ಣರ ಸಾಹಿತ್ಯ ಕ್ಷೇತ್ರ ಕೊಡುಗೆ ಪರಿಚಯ ಅಗತ್ಯ: ನಾಗೇಂದ್ರಬಾಬು