ಬಳ್ಳಾರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಹಾಗೂ ಸಿಎಂ ಅವರನ್ನು ಬೆಂಬಲಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ಜರುಗಿತು.
ಈ ಕೆಲಸಕ್ಕೆ ರಾಜ್ಯಪಾಲರನ್ನು ಬಳಸಿಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಸದ ಈ.ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನಾತ್ಮಕವಾಗಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ನಡೆಸುತ್ತಿರುವುದು ಸರಿಯಲ್ಲ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಅನೇಕ ಹಗರಣಗಳು ನಡೆದರೂ ಯಾವುದೇ ಕ್ರಮಕ್ಕೆ ಮುಂದಾಗದ ಕೇಂದ್ರದ ಸರ್ಕಾರ, ಇದೀಗ ಮುಡಾ ಹಗರಣದ ನೆಪದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ನಾನಾ ಷಡ್ಯಂತ್ರಗಳನ್ನು ನಡೆಸಿದೆ ಎಂದು ದೂರಿದರು.ಪ್ರತಿಪಕ್ಷಗಳ ನಾಯಕರನ್ನು ಹತ್ತಿಕ್ಕಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರದ ಯಾವುದೇ ಹುನ್ನಾರ ಹಾಗೂ ಕುತಂತ್ರಕ್ಕೆ ಜಗ್ಗುವುದಿಲ್ಲ. ರಾಜ್ಯಾದ್ಯಂತ ಹೋರಾಟಗಳನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಬಿಜೆಪಿಯ ನೀತಿಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಇಲ್ಲಿನ ಗಾಂಧಿಭವನದಿಂದ ಶುರುಗೊಂಡ ಪ್ರತಿಭಟನಾ ಮೆರವಣಿಗೆ ಗಡಗಿಚನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಬಳಿಕ ಜಿಲ್ಲಾಡಳಿತ ಮೂಲಕ ಮನವಿ ಸಲ್ಲಿಸಲಾಯಿತು.