ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸಿಲ್ವರ್ ಜ್ಯೂಬಿಲಿ ಉದ್ಯಾನವನದ ಬಳಿ ನೆರೆದ ನೂರಾರು ಭಕ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿಬಂದರು. ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿ ಪ್ರತಿಭಟನಾ ಧರಣಿ ನಡೆಸಿದರು.
ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಎಂ.ಡಿ.ಸಮೀರ್, ಸಂತೋಷ್ ಶೆಟ್ಟಿ, ಟಿ.ಜಯಂತ್, ಅಜಯ್ ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದೇಗುಲ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆಯನ್ನು ಉಪಯೋಗಿಸುತ್ತಿದ್ದಾರೆ. ಅದರ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ. ಕ್ಷೇತ್ರವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ನಿರಂತರವಾಗಿ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವುದರಿಂದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.ಅನಾಮಿಕ ವ್ಯಕ್ತಿಯೊಬ್ಬ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. ಅದನ್ನು ಕ್ಷೇತ್ರದ ಭಕ್ತವೃಂದದವರಾದ ನಾವೆಲ್ಲರೂ ಸ್ವಾಗತಿಸುತ್ತೇವೆ. ಆದರೆ, ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲ ತಾಣಗಳ ಮೂಲಕ ಸುಳ್ಳು ಮಾಹಿತಿ ಬಿತ್ತರಿಸಿ ಭಕ್ತರಿಗೆ ನೋವುಂಟು ಮಾಡುತ್ತಿರುವುದನ್ನು ನಾವು ಸಹಿಸುವುದಿಲ್ಲ ಎಂದು ಟೀಕಿಸಿದ್ದಾರೆ.
ತಮ್ಮ ಮೊಬೈಲ್‌ನಲ್ಲಿ ಸಾಕ್ಷಿಗಳಿವೆ ಎಂದು ವೇದಿಕೆಗಳು, ಸಾಮಾಜಿಕ ಜಾಲ ತಾಣಗಳಲ್ಲಿ ಘಂಟಾಘೋಷವಾಗಿ ಭಾಷಣ ಬಿಗಿಯುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ.ಜಯಂತ್, ಸಂತೋಷ್ ಶೆಟ್ಟಿ, ಅಜಯ್ ಅಂಚನ್ ಅವರನ್ನು ವಿಚಾರಣೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು. ಈ ನಿಟ್ಟಿನಲ್ಲಿ ಈಗಿರುವ ಎಸ್‌ಐಟಿ ತಂಡ ಅಥವಾ ಮತ್ತೊಂದು ತನಿಖಾ ತಂಡ ರಚಿಸಿ ಕೂಡಲೇ ತನಿಖೆ ಕೈಗೊಳ್ಳುವಂತೆ ಆಗ್ರಹಪಡಿಸಿದರು.
ಪ್ರತಿಭಟನೆಯಲ್ಲಿ ತಗ್ಗಹಳ್ಳಿ ವೆಂಕಟೇಶ್, ಕಾರಸವಾಡಿ ಮಹದೇವು, ಬಿಜೆಪಿ ನಗರ ಘಟಕದ ಅಧ್ಯಕ್ಷ ವಸಂತಕುಮಾರ್, ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ, ಬಜರಂಗಸೇನೆ ಮಂಜುನಾಥ, ಕೆ.ಸಿ.ರವೀಂದ್ರ, ಎಂ.ವಿ.ಧರಣೇಂದ್ರಯ್ಯ, ಮಂಜೇಶ್, ಶಾಂತಿಪ್ರಸಾದ್ ಸೇರಿದಂತೆ ಶ್ರೀ ಧರ್ಮಸ್ಥಳ ಸ್ವಸಹಾಯ ಸಂಘದ ಮಹಿಳಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.