ಕನ್ನಡಪ್ರಭ ವಾರ್ತೆ ಚಾಮರಾಜನಗರ
23ರಂದು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು, ತಾಲೂಕುಗಳು ಹಾಗೂ ಜಿಲ್ಲಾ ಕೇಂದ್ರದಲ್ಲಿ ಬಾಲ್ಯವಿವಾಹ ನಿಯಂತ್ರಣ ಅರಿವು ಮೂಡಿಸುವ ಘೋಷಣೆಗಳೊಂದಿಗೆ ವಾಕಾಥಾನ್, ಪ್ರತಿಜ್ಞಾ ಸ್ವೀಕಾರ ಕುರಿತ ಬೃಹತ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮರಾಜನಗರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧಾಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲಾದ್ಯಂತ ಬಾಲ್ಯವಿವಾಹ ತಡೆಗೆ ಪರಿಣಾಮಕಾರಿ ಕಾರ್ಯಕ್ರಮಗಳು ಹಾಗೂ ಜಾಗೃತಿ ಚಟುವಟಿಕೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿ ಬಳಿಕ ಅವರು ಮಾತನಾಡಿದರು.
ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳಾಗಿದ್ದರೂ ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ್ಯವಿವಾಹ ಪ್ರಕರಣಗಳು ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಜನರಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದೆ. ಆದರೂ ಸಹ ಬಡತನ ಹಾಗೂ ಸಾಂಪ್ರಾದಾಯಿಕ ಕಾರಣಗಳಿಂದ ಬಾಲ್ಯವಿವಾಹ ಜೀವಂತವಾಗಿ ಉಳಿದಿದೆ. ಇದನ್ನು ಸಂಪೂರ್ಣವಾಗಿ ತಡೆಯಲು ಹತ್ತು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಎರ್ಪಡಿಸಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಅದರ ಭಾಗವಾಗಿ ವಾಕಾಥಾನ್, ಪ್ರತಿಜ್ಞಾ ಸ್ವೀಕಾರ ಬೃಹತ್ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.ಮಾರ್ಚ್ ಮಾಹೆಯಲ್ಲಿ ನಡೆದ ಅಂತಅರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾ. 1ರಿಂದ ನವೆಂಬರ್ 14ರವರೆಗೆ ಪ್ರತಿ ಗ್ರಾಮ ಪಂಚಾಯಿತಿಗಳು ಹಾಗೂ ಎಲ್ಲಾ ತಾಲೂಕುಗಳನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ಕುರಿತು ಪ್ರಸ್ತಾಪಿಸಲಾಗಿತ್ತು. ಬಾಲ್ಯವಿವಾಹ ನಿರ್ಮೂಲನೆ ಕಾರ್ಯದಲ್ಲಿ ಪ್ರಗತಿ ಸಾಧಿಸಿ ಉತ್ತಮ ಫಲಿತಾಂಶ ನೀಡುವ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸುವ ಗುರಿ ಹೊಂದಲಾಗಿತ್ತು. ಅದರನ್ವಯ ಬಾಲ್ಯವಿವಾಹ ನಿಯಂತ್ರಣಕ್ಕೆ ಎಲ್ಲರೊಂದಿಗೆ ಸಮನ್ವಯ ಸಾಧಿಸಿ ಕಾರ್ಯೋನ್ಮುಖರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬಾಲ್ಯವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ಮೇ 23ರಂದು ಬೃಹತ್ ಜಾಗೃತಿ ಕಾರ್ಯಕ್ರಮವನ್ನು ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದೆ. ಅಂದು ಜಿಲ್ಲೆಯ ಗ್ರಾಮ ಪಂಚಾಯಿತಿಗಳು, ತಾಲೂಕುಗಳಲ್ಲಿಯೂ ಕಾರ್ಯಕ್ರಮ ಆಯೋಜಿತವಾಗಿದೆ. ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ವರ್ತಕರು, ಉದ್ಯಮಿಗಳು, ವಿವಿಧ ಸಂಘಸಂಸ್ಥೆಗಳು ಪಾಲ್ಗೊಳ್ಳಲಿವೆ. ವಾಕಾಥಾನ್ ಕಾರ್ಯಕ್ರಮ ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಆರಂಭವಾಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಅವರು ತಿಳಿಸಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ, ಚಾಮರಾಜನಗರವನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ಮುಖ್ಯವಾಗಿ ಅರಿವು ಮೂಡಿಸುವಂತಹ ಪ್ರಭಾವಿ ಚಟುವಟಿಕೆಗಳನ್ನು ಹಮ್ಮಿಕೊಳ್ಳ್ಳುವ ಮೂಲಕ ರಾಜ್ಯ ಹಾಗೂ ದೇಶದ ಗಮನ ಸೆಳೆಯುವ ಕಾರ್ಯವಾಗಬೇಕು. ದೇಶದಲ್ಲಿಯೇ ಚಾಮರಾಜನಗರ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಳಮಟ್ಟದ ಅಧಿಕಾರಿಗಳಿಂದ ಬಾಲ್ಯವಿವಾಹ ತಡೆಗಟ್ಟುವ ಕಾರ್ಯಕ್ಕೆ ಸ್ಪಂದನೆ ದೊರೆಯಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಡಿವೈಎಸ್‌ಪಿ ಲಕ್ಷ್ಮಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಲುವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.------
18ಸಿಎಚ್‌ಎನ್52ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮರಾಜನಗರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇದಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ನಡೆಸಿದರು.
-------