ಸವದತ್ತಿ ಯಲ್ಲಮ್ಮ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

KannadaprabhaNewsNetwork |  
Published : Jan 09, 2024, 02:00 AM IST
ಸವದತ್ತಿ ಯಲ್ಲಮ್ಮ ಸುಕ್ಷೇತ್ರಕ್ಕೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ, ದರ್ಶನ ಪಡೆದರು. | Kannada Prabha

ಸಾರಾಂಶ

ದೇವಸ್ಥಾನ ಆದಾಯದಲ್ಲಿ ಉಳಿಯುವ ಹಣದಲ್ಲಿ ಮಾಸ್ಟರ್‌ ಪ್ಲಾನ್‌ ಅನುಷ್ಠಾನಕ್ಕೆ ಬಳಕೆ ಮಾಡಿಕೊಳ್ಳುವುದಾಗಿ ಸಚಿವ ರೆಡ್ಡಿ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಸ್ಥಾನವು ಪ್ರತಿವರ್ಷ ಅಂದಾಜು ₹20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಸ್ಥಾನ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಅಲ್ಲದೇ‌ ಸರ್ಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು. ಜತೆಗೆ ಪ್ರವಾಸೋದ್ಯಮ ಇಲಾಖೆಯಿಂದಲೂ ಪ್ರತ್ಯೇಕ ಯೋಜನೆಯನ್ನು ರೂಪಿಸುವ ಮೂಲಕ ಒಟ್ಟಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಾಲಮಿತಿಯಲ್ಲಿ ಕ್ರಮಕೈಗೊಳ್ಳಲಾಗುವುದು. ಹೀಗಾಗಿ ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್‌ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಮುಜರಾಯಿ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಅಭಿವೃದ್ಧಿ ಕಾಮಗಾರಿಗಳಳನ್ನು ಕೈಗೊಳ್ಳಲು ಉದ್ಧೇಶಿಸಲಾಗಿದೆ. ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಲಭ್ಯವಿರುವ 87 ಎಕರೆ ಪ್ರದೇಶದಲ್ಲಿ ಮುಂದಿನ 10 ವರ್ಷಗಳ ಅವಧಿಯಲ್ಲಿ ಹಂತ, ಹಂತವಾಗಿ ಅನುಷ್ಠಾನಗೊಳಿಸಬಹುದಾದ ಸಮಗ್ರ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ. ಜಾತ್ರೆ ವೇಳೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್‌ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ನಾಲ್ಕೈದು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ನೆರಳು, ಶೌಚಾಲಯ ವ್ಯವಸ್ಥೆ ಮತ್ತಿತರೆ ಮೂಲಸೌಕರ್ಯಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುಂಚೆ ನಡೆದ ಅಧಿಕಾರಿಗಳ ಸಭೆಯಲ್ಲಿ‌ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ ಮಾತನಾಡಿ, ಯಲ್ಲಮ್ಮ ದೇವಿ ದೇವಸ್ಥಾನದ ಒಳಹೋಗಲು ಒಂದು ದ್ವಾರ ಮಾತ್ರ ತೆರೆಯಲಾಗಿದೆ. ಆದರೆ, ಗುಡ್ಡಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ನಾಲ್ಕೂ ದ್ವಾರಗಳನ್ನು ತೆರೆದು ಅನುಕೂಲ ಕಲ್ಪಿಸಬೇಕು. ಭಕ್ತರು ಸುಲಭವಾಗಿ ದರ್ಶನ ಪಡೆಯಲು ಅನುಕೂಲವಾಗುವಂತೆ ದೇವಸ್ಥಾನದ ಎರಡೂ ಕಡೆ ಕಾಲುಸೇತುವೆ ನಿರ್ಮಿಸಬೇಕು. ಭಕ್ತರ ಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕು ಎಂದು ಸಲಹೆ ನೀಡಿದರು.

ಮುಜರಾಯಿ ಇಲಾಖೆಯ ಆಯುಕ್ತ ಬಸವರಾಜೇಂದ್ರ, ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ.ಬಿ.ಮಹೇಶ್, ಲೋಕೋಪಯೋಗಿ ಇಲಾಖೆ, ನಿರ್ಮಿತಿ‌ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

------------ಕೋಟ್‌....

ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು. ದೇವಸ್ಥಾನವು ಪ್ರತಿವರ್ಷ ಅಂದಾಜು ₹ 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಸ್ಥಾನ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ.

- ರಾಮಲಿಂಗಾರೆಡ್ಡಿ, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ