ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ‘ಮಾಸ್ತಿ ವೆಂಕಟೇಶ ಅಯ್ಯಂಗಾರ್’ರ 133ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಮಾಸ್ತಿಯವರ ‘ಕೆಲವು ಸಣ್ಣ ಕಥೆಗಳು’ ಎಂಬ ಪ್ರಥಮ ಕೃತಿಯು 1920ರಲ್ಲಿ ಪ್ರಕಟವಾಯಿತು. ಇದು ಆಧುನಿಕ ಕನ್ನಡದ ಸಾಹಿತ್ಯದ ವಿಶಿಷ್ಟವಾದ ಮೊದಲ ಕೃತಿಯೆನಿಸಿದೆ. ಹಾಗೆ ನೋಡಿದರೆ ಸಣ್ಣಕಥೆಯನ್ನು ಮೊದಲು ಬರೆದವರು ಮಾಸ್ತಿಯವರಲ್ಲದೇ ಇದ್ದರೂ ಕೂಡಾ, ಕಥೆಗಳಿಗೆ ಮತ್ತು ಮಾಸ್ತಿಯವರಿಗೆ ಅನ್ಯೋನ್ಯವಾದ ಬಾಂಧವ್ಯವಿದೆ. ಆದ್ದರಿಂದಲೇ ಇವರು ಕನ್ನಡ ಕಥಾ ಸಾಹಿತ್ಯದ ಪ್ರಮುಖರೆನಿಸಿಕೊಂಡು, ‘ಕನ್ನಡದ ಆಸ್ತಿ’ಯಾಗಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದರು.ಮುಖ್ಯ ಅತಿಥಿಯಾಗಿದ್ದ ಕಸಾಪ ಉತ್ತರ ವಲಯ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ ಮಾತನಾಡಿ, ಕುವೆಂಪು ‘ಮಾಸ್ತಿಯವರ ಸಾಹಿತ್ಯ ದೊಡ್ಡದು. ಅವರು ಅದಕ್ಕಿಂತಲೂ ದೊಡ್ಡವರೆಂಬ ನನ್ನ ಭಾವನೆ’ ಎಂದಿರುವ ಮಾತು ಮಾಸ್ತಿಯವರ ಮೇರು ವ್ಯಕ್ತಿತ್ವ ತೋರಿಸುತ್ತದೆ. ಕನ್ನಡ ಸಾಹಿತ್ಯ, ಭಾಷೆಗೆ ಮಾಸ್ತಿ ವೆಂಕಟೇಶ ಅಯ್ಯಂಗಾರ್ ನೀಡಿರುವ ಕೊಡುಗೆ ಬಹು ಮೌಲ್ಯಯುತವಾಗಿದೆ. ಅವರೊಬ್ಬ ಕನ್ನಡ ಸಾರಸತ್ವ ಲೋಕದ ಮೇರು ಸಾಹಿತಿಯಾಗಿದ್ದಾರೆ ಎಂದು ನುಡಿದರು.