ಶಾಹೂ ಮಹಾರಾಜರ ಆಡಳಿತ ಇಂದಿನ ಸರ್ಕಾರಗಳಿಗೆ ಆದರ್ಶವಾಗಲಿ

KannadaprabhaNewsNetwork |  
Published : Jul 27, 2026, 01:45 AM IST
26ಎಚ್ಎಸ್ಎನ್14 :  | Kannada Prabha

ಸಾರಾಂಶ

ಶಾಹೂ ಮಹಾರಾಜರು ಜಾರಿಗೆ ತಂದ ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿದ್ದು, ಅವುಗಳ ಅನುಷ್ಠಾನದಿಂದ ಮಾತ್ರ ನಿಜವಾದ ಸಾಮಾಜಿಕ ನ್ಯಾಯ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಮಹಾತ್ಮ ಜ್ಯೋತಿರಾವ್ ಫುಲೆ, ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ, ಛತ್ರಪತಿ ಶಾಹೂ ಮಹಾರಾಜ್, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕಾನ್ಶಿರಾಮ್ ಅವರ ವಿಚಾರಧಾರೆಗಳು ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಅದರ ಆಶಯಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಜನಪರ ಆಡಳಿತದ ಪರಿಕಲ್ಪನೆಯನ್ನು ದೇಶಕ್ಕೆ ಪರಿಚಯಿಸಿದ ಛತ್ರಪತಿ ಶಾಹೂ ಮಹಾರಾಜರ ಆಡಳಿತ ಮಾದರಿ ಇಂದಿನ ಸರ್ಕಾರಗಳಿಗೆ ಮಾರ್ಗದರ್ಶಿಯಾಗಬೇಕು ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ರಾಜ್ಯ ಸಂಯೋಜಕ ಗಂಗಾಧರ್ ಬಹುಜನ್ ಅಭಿಪ್ರಾಯಪಟ್ಟರು.

ನಗರದ ಸ್ವಾಭಿಮಾನ ಭವನದಲ್ಲಿ ಬಿಎಸ್ಪಿ ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ ಛತ್ರಪತಿ ಶಾಹೂ ಮಹಾರಾಜ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಶಾಹೂ ಮಹಾರಾಜರು ಅಧಿಕಾರವನ್ನು ಕೇವಲ ಆಡಳಿತದ ಸಾಧನವಾಗಿ ಬಳಸದೇ, ಸಾಮಾಜಿಕ ಪರಿವರ್ತನೆಯ ಪ್ರಬಲ ಮಾಧ್ಯಮವನ್ನಾಗಿ ರೂಪಿಸಿದ್ದರು. ಶಿಕ್ಷಣ, ಉದ್ಯೋಗ, ಆಡಳಿತ ಹಾಗೂ ಸಾಮಾಜಿಕ ಅವಕಾಶಗಳಿಂದ ವಂಚಿತರಾಗಿದ್ದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಅವರು ಜಾರಿಗೆ ತಂದ ಸುಧಾರಣಾ ಕ್ರಮಗಳು ಭಾರತೀಯ ಸಮಾಜದಲ್ಲಿ ಹೊಸ ಚಿಂತನೆಗೆ ನಾಂದಿ ಹಾಡಿದವು ಎಂದರು. ಭಾರತದ ಸಂವಿಧಾನ ಜಾರಿಗೆ ಬರುವುದಕ್ಕೂ ಮುನ್ನವೇ ತಮ್ಮ ಸಂಸ್ಥಾನದಲ್ಲಿ ಹಿಂದುಳಿದ ವರ್ಗಗಳಿಗೆ ಶೇ.೫೦ರಷ್ಟು ಮೀಸಲಾತಿ ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಐತಿಹಾಸಿಕ ಹೆಜ್ಜೆ ಇಟ್ಟಿದ್ದರು. ಇಂತಹ ದೂರದೃಷ್ಟಿಯ ಆಡಳಿತವೇ ನಂತರ ದೇಶದಲ್ಲಿ ಮೀಸಲಾತಿ ವ್ಯವಸ್ಥೆಗೆ ಪ್ರೇರಣೆಯಾಯಿತು. ಸಮಾಜದ ದುರ್ಬಲ ವರ್ಗಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಶಾಹೂ ಮಹಾರಾಜರ ಕೊಡುಗೆ ಅಪಾರವಾಗಿದೆ ಎಂದು ಅವರು ತಿಳಿಸಿದರು. ಇಂದಿನ ಸರ್ಕಾರಗಳು ಅಭಿವೃದ್ಧಿಯನ್ನು ಕೆಲವೇ ವರ್ಗಗಳಿಗೆ ಸೀಮಿತಗೊಳಿಸದೆ, ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸುವ ನೀತಿಗಳನ್ನು ರೂಪಿಸಬೇಕು. ಶಾಹೂ ಮಹಾರಾಜರು ಜಾರಿಗೆ ತಂದ ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿದ್ದು, ಅವುಗಳ ಅನುಷ್ಠಾನದಿಂದ ಮಾತ್ರ ನಿಜವಾದ ಸಾಮಾಜಿಕ ನ್ಯಾಯ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಮಹಾತ್ಮ ಜ್ಯೋತಿರಾವ್ ಫುಲೆ, ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ, ಛತ್ರಪತಿ ಶಾಹೂ ಮಹಾರಾಜ್, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕಾನ್ಶಿರಾಮ್ ಅವರ ವಿಚಾರಧಾರೆಗಳು ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಈ ಮಹನೀಯರ ತತ್ವಾದರ್ಶಗಳನ್ನು ಯುವಜನತೆಗೆ ಪರಿಚಯಿಸುವ ಮೂಲಕ ಸಾಮಾಜಿಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಅದರ ಆಶಯಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮೀಸಲಾತಿ ಮತ್ತು ಸಾಮಾಜಿಕ ನ್ಯಾಯವು ಯಾವುದೇ ವರ್ಗದ ವಿರುದ್ಧದ ಕ್ರಮವಲ್ಲ; ಸಮಾಜದ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಪ್ರಜಾಪ್ರಭುತ್ವದ ವ್ಯವಸ್ಥೆಯಾಗಿದೆ ಎಂದು ಅವರು ಹೇಳಿದರು.ಕಾರ್ಯಕ್ರಮದ ಆರಂಭದಲ್ಲಿ ರಾಜರ್ಷಿ ಛತ್ರಪತಿ ಶಾಹೂ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ನಂತರ ವಿವಿಧ ಮುಖಂಡರು ಶಾಹೂ ಮಹಾರಾಜರ ಜೀವನ, ಸಾಮಾಜಿಕ ಸುಧಾರಣಾ ಕಾರ್ಯಗಳು, ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಅವರು ನಡೆಸಿದ ಹೋರಾಟದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದೇ ವೇಳೆ ಬಿಎಸ್ಪಿ ಜಿಲ್ಲಾಧ್ಯಕ್ಷ ಲಕ್ಷಣ್ ಕೀರ್ತಿ, ಉಪಾಧ್ಯಕ್ಷ ಶಾಕೀರ್‌ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಸಿ.ಜಿ., ಖಜಾಂಚಿ ಎಂ.ಎಸ್. ನಾಗರಾಜ್, ಜಿಲ್ಲಾ ಕಾರ್ಯದರ್ಶಿಗಳಾದ ಕಿರಣ್ ಕುಮಾರ್‌, ರಾಜು ಬೆಳ್ಳೊಟ್ಟೆ, ಸಿದ್ದಲಿಂಗಯ್ಯ, ಮನುಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯವರ್ಧನ್ ಹಾಗೂ ಯಶೋಧಮ್ಮ, ವಕೀಲ ರಾಜೇಶ್ ಸಾಣೇನಹಳ್ಳಿ, ವಿವಿಧ ತಾಲೂಕು ಘಟಕಗಳ ಅಧ್ಯಕ್ಷರಾದ ಪ್ರಕಾಶ್ ಕೆಸಗೋಡು, ರಾಜು ಕುಂದೂರು, ವೀರೇಶ್ ಕಲ್ಗಣೆ, ಶಿವಶೇಖರ, ಬಿವಿಎಫ್ ಮುಖಂಡ ಡಿ.ವಿ. ಯೋಗೀಶ್, ಉಮೇಶ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಮಾಜದ ವಿವಿಧ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗೆ ಸ್ಮಾರ್ಟ್ ಟಿವಿ ಕೊಡುಗೆ
ಯೋಧರ ಸೇವೆ ಒಂದೇ ದಿನಕ್ಕೆ ಸೀಮಿತವಲ್ಲ