ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಲಿ

KannadaprabhaNewsNetwork |  
Published : Oct 08, 2024, 01:10 AM IST
ಸಭೆಯನ್ನು ಉದ್ದೇಶಿಸಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು.  | Kannada Prabha

ಸಾರಾಂಶ

ವಿವಿಧ ಇಲಾಖೆಯ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಬೇಕು

ಗದಗ: ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಸೋಮವಾರ ಸಂಜೆ ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನರೇಗಾ ಯೋಜನೆಗೆ ನೇರವಾಗಿ ಅನುದಾನ ಬರುತ್ತಿದ್ದು, ಗ್ರಾಮದ ಮೂಲಭೂತ ಸೌಲಭ್ಯಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಪಿಡಿಓ ಹಾಗೂ ತಾಪಂ ಇಒ ಗಳು ಶ್ರಮಿಸಬೇಕು.

ವಿವಿಧ ಇಲಾಖೆಯ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಬೇಕು ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ತಲುಪಿಸುವಲ್ಲಿ ಅಧಿಕಾರಿಗಳು ತಮ್ಮ ಕಾರ್ಯ ಶೈಲಿಯಲ್ಲಿ ಸಕಾರಾತ್ಮಕ ಬದಲಾವಣೆ ತಂದುಕೊಂಡು ಒಂದು ತಂಡವಾಗಿ ಕೆಲಸ ಮಾಡಬೇಕು ಎಂದರು.

ಜಲಜೀವನ್ ಮಿಷನ್ ಕೇಂದ್ರದ ಸರ್ಕಾರದ ಮಹಾತ್ವಾಕಾಂಕ್ಷೆ ಯೊಜನೆಯಾಗಿದ್ದು, ಇಲ್ಲಿಯವರೆಗೆ ಗುರಿ ಸಾಧಿಸಲಾಗಿದ್ದು ತಾಂತ್ರಿಕ ತೊಂದರೆ ಸರಿಪಡಿಸಿ ಪ್ರತಿ ಮನೆ ಮನೆಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮ ಪಟ್ಟಿ ಮಾಡಿ ಪರಿಶೀಲನೆ ನಡೆಸಬೇಕು. ಪ್ರಧಾನ ಆವಾಸ್ ಯೋಜನೆಯಡಿ 2016 ರಿಂದ 2020 ರವರೆಗೆ 5747 ಗುರಿಯಿದ್ದು ಆ ಪೈಕಿ 4855 ಮನೆಗಳು ಮುಕ್ತಾಯವಾಗಿದ್ದು ಇನ್ನೂ 892 ಮನೆಗಳು ಬಾಕಿ ಇದ್ದು ಇದಕ್ಕೆ ಪ್ರತ್ಯೇಕವಾದ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದರು.

ಗದಗ ಜಿಲ್ಲೆಯು ತೋಟಗಾರಿಕೆಗೆ ಪೂರಕ ವಾತಾವರಣ ಹೊಂದಿದ್ದು, ರೈತರು ಆದಾಯ ಹೆಚ್ಚಿಸುವುದರ ಬಗ್ಗೆ ಮನವರಿಕೆ ಮಾಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು. ವರ್ಷದಿಂದ ವರ್ಷಕ್ಕೆ ತೋಟಗಾರಿಕೆ ವಿಸ್ತರಣೆಯಾಗುವಂತೆ ಕ್ರಮ ವಹಿಸಬೇಕು. ಜನೌಷದಿ ಕೇಂದ್ರಗಳು ಸರಿಯಾಗಿ ಕಾರ್ಯ ನಿರ್ವಹಿಸಿ ಬಡ ಜನರಿಗೆ ಉಪಯೋಗ ಆಗಬೇಕು ಎಂದರು.

ವಿಪ ಶಾಸಕ ಎಸ್.ವಿ. ಸಂಕನೂರ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಶಿಕ್ಷಕರು ಕಾರ್ಯ ನಿರ್ವಹಿಸಬೇಕು. ಶಿಕ್ಷಕರು ಕೊರತೆಯಿದ್ದ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಬೇಕು. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು.

ಕೃಷಿ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ರೈತರಿಗೆ ವಿತರಿಸಲು ರಸಗೊಬ್ಬರ ಮತ್ತು ಬೀಜಗಳು ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದ್ದು, ಯಾವುದೇ ರೀತಿಯ ಕೊರತೆಯಿರುವುದಿಲ್ಲವೆಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಹೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಪರಿಶಿಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿ.ಇ ಓ ಭರತ್ ಎಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ