ದುರ್ಬಲರಿಗೆ ಕಾಲಮಿತಿಯಲ್ಲಿ ನ್ಯಾಯ ದೊರಕಲಿ

KannadaprabhaNewsNetwork |  
Published : Jan 11, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್  | Kannada Prabha

ಸಾರಾಂಶ

ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ನಡುವೆ ಸಮನ್ವಯ ಅಗತ್ಯವಾಗಿದೆ. ದುರ್ಬಲ ಕಾಲಮಿತಿಯಲ್ಲಿ ನ್ಯಾಯ ದೊರಕಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಅನು ಶಿವರಾಮನ್ ಪ್ರತಿಪಾದಿಸಿದರು.

ಚಿತ್ರದುರ್ಗ: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ನಡುವೆ ಸಮನ್ವಯ ಅಗತ್ಯವಾಗಿದೆ. ದುರ್ಬಲ ಕಾಲಮಿತಿಯಲ್ಲಿ ನ್ಯಾಯ ದೊರಕಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಅನು ಶಿವರಾಮನ್ ಪ್ರತಿಪಾದಿಸಿದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕಾನೂನು ಸೇವಾ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಬೇಕು ಎಂಬ ಸದುದ್ದೇಶದಿಂದ 1985ರ ಕಾಯ್ದೆಯಡಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಸ್ಥಾಪಿಸಲಾಗಿದೆ. ಇದರಡಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರಮಟ್ಟದಲ್ಲಿ ರೂಪಿಸಿರುವ ಯೋಜನೆಗಳನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕೆಲಸವನ್ನು ಯಾಂತ್ರಿಕವಾಗಿ ಶಿಷ್ಟಾಚಾರದ ಹಿನ್ನೆಲೆಯಲ್ಲಿ ನಿರ್ವಹಿಸದೇ, ಮಾನವೀಯ ಕಳಕಳಿಯೊಂದಿಗೆ ನಿರ್ವಹಿಸಬೇಕು ಎಂದರು. ಕರ್ನಾಟಕ ವಿಶಾಲವಾಗಿದ್ದು, ಪ್ರತಿಯೊಂದು ಜಿಲ್ಲೆಯಲ್ಲಿಯೂ ವಿಭಿನ್ನ ರೀತಿಯ ಸಮಸ್ಯೆಗಳು ಇವೆ. ಇದನ್ನು ಅರಿತು ಪ್ರತಿಯೊಂದು ಜಿಲ್ಲಾಮಟ್ಟದ ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸಬೇಕು. ನ್ಯಾಯಾಧೀಶರ ಕರ್ತವ್ಯಕ್ಕಿಂತಲೂ ಕಾನೂನು ಸೇವಾ ಪ್ರಾಧಿಕಾರದ ಕರ್ತವ್ಯಗಳು ಭಿನ್ನವಾಗಿವೆ. ಜಿಲ್ಲಾ ಮಟ್ಟದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗ ನಿರ್ವಹಿಸಬೇಕಾದ ಆಡಳಿತಾತ್ಮಕ ಕೆಲಸಗಳ ಮೇಲ್ವಿಚಾರಣೆಯೊಂದಿಗೆ, ಸಂವಿಧಾನದ ಆಶಯ ಈಡೇರಿಸುವಲ್ಲಿ, ನ್ಯಾಯವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಕೆಲಸವನ್ನು ಕಾನೂನು ಸೇವಾ ಪ್ರಾಧಿಕಾರಗಳು ಮಾಡಬೇಕು. ಈ ಹಿನ್ನೆಲೆಯಲ್ಲಿಯೇ ರಾಜ್ಯದ ಹೃದಯ ಭಾಗದಲ್ಲಿರುವ ಚಿತ್ರದುರ್ಗ ನಗರದಲ್ಲಿ ಎಲ್ಲಾ ಜಿಲ್ಲೆಗಳ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ತಿಳಿಸಿದರು.ಕಾನೂನು ಸೇವಾ ಪ್ರಾಧಿಕಾರ ನ್ಯಾಯ ಸಿಗದ ಅಸಹಾಯಕ ಮತ್ತು ತುಳಿತಕ್ಕೊಳಗಾದ ಜನರ ಸೇವೆಗಾಗಿ ಇದ್ದು, ಕಾನೂನು ನೆರವು ಪಡೆಯುವುದು ಅವರ ಹಕ್ಕು ಮತ್ತು ಅದನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಬಹಳಷ್ಟು ವೇಳೆ ನೊಂದವರಿಗೆ ಸಕಾಲದಲ್ಲಿ ನ್ಯಾಯ ಹಾಗೂ ಪರಿಹಾರ ದೊರಕುವುದಿಲ್ಲ. ಈ ವ್ಯವಸ್ಥೆ ಬದಲಾಗಬೇಕು. ನ್ಯಾಯಾಲಯಗಳು ನೀಡುವ ಪರಿಹಾರದ ಆದೇಶಗಳನ್ನು ಸಕಾಲದಲ್ಲಿ ಜಾರಿಯಾಗಬೇಕೆಂದರು.

ಸಂತ್ರಸ್ತರಿಗೆ ಶೀಘ್ರವಾಗಿ ಪರಿಹಾರ ನೀಡಬೇಕು. ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಜಿಲ್ಲೆಗಳಿಗೆ ಸಂಬಂಧಿದಂತೆ ಸುಮಾರು ರು.6 ಕೋಟಿಯಷ್ಟು ಶುಲ್ಕ ಹಾಗೂ ರು.21 ಕೋಟಿಯಷ್ಟು ಸಂತ್ರಸ್ತರ ಪರಿಹಾರ ಪಾವತಿ ಬಾಕಿಯಿದೆ. ಬಿಲ್‍ಗಳ ವಿಲೇವಾರಿ, ಹಣಕಾಸು ನಿರ್ವಹಣೆ ಮತ್ತು ಖಾತೆಗಳ ನಿರ್ವಹಣೆಯನ್ನು ಕಾಲಮಿತಿಯಲ್ಲಿ ಮಾಡಬೇಕು. ವಾರದ ಅಂತ್ಯದೊಳಗೆ ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಎಂ.ಜಿ.ಉಮಾ ಅವರು ಲೆಕ್ಕಪತ್ರ ನಿರ್ವಹಣೆ ಮತ್ತು ಕಾನೂನು ಸೇವೆಗಳ ಚಟುವಟಿಕೆಗಳು ಕುರಿತು, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಾಧೀಶ ವಿ.ಶ್ರೀಶಾನಂದ ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಪಾತ್ರ ಮತ್ತು ಜವಾಬ್ದಾರಿಗಳು ಕುರಿತು, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯ್ಕ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ಸರ್ಕಾರಿ ಇಲಾಖೆಗಳೊಂದಿಗೆ ಸಹಯೋಗ ಮತ್ತು ಸಮನ್ವಯ ಎಂಬ ವಿಷಯದ ಕುರಿತು ಮಾತನಾಡಿದರು.ಕಾರ್ಯಾಗಾರದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ, ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ್, ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ