ಗದಗ: ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ ಆಶಾಕಿರಣವಾಗಿದ್ದಾರೆ. ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳುವುದರ ಜೊತೆಗೆ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ಅ ಮಾತನಾಡಿ, ದೇಶದ ಯುವಜನರಲ್ಲಿ ಸರ್ಕಾರದ ಕಾರ್ಯವೈಖರಿ ಹಾಗೂ ಕಾನೂನು ವ್ಯವಸ್ಥೆಯ ಕುರಿತು ಸಮಗ್ರ ತಿಳಿವಳಿಕೆ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ದೇಶದ ಆಡಳಿತ ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ, ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಜವಾಬ್ದಾರಿಗಳೇನು ಎಂಬುದರ ಅರಿವು ಯುವಜನರಿಗೆ ಇರಬೇಕು. ವಿರೋಧ ಪಕ್ಷದ ಕೆಲಸ ಕೇವಲ ಆಡಳಿತ ಪಕ್ಷವನ್ನು ಟೀಕಿಸುವುದಕ್ಕೆ ಸೀಮಿತವಾಗಬಾರದು. ಆಡಳಿತ ಪಕ್ಷ ಉತ್ತಮ ಕಾರ್ಯ ಕೈಗೊಂಡಾಗ ಅವುಗಳನ್ನು ಮುಕ್ತ ಮನಸ್ಸಿನಿಂದ ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಜಿಲ್ಲಾ ಜಾಗೃತ ಸಮಿತಿ ಮತ್ತು ಸಫಾಯಿ ಕರ್ಮಚಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ಎಂ.ಎ.ಯರಗುಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ಸಮಾಜದಲ್ಲಿ ಅರ್ಹತೆ ಮತ್ತು ಸಾಮರ್ಥ್ಯ ಹೊಂದಿರುವವರಿಗೆ ಸೂಕ್ತ ಸ್ಥಾನಮಾನ ಹಾಗೂ ಅವಕಾಶಗಳನ್ನು ಕಲ್ಪಿಸಿದಾಗ ಮಾತ್ರ ವ್ಯವಸ್ಥೆ ಸರಿಯಾದ ದಿಕ್ಕಿನಲ್ಲಿ ಸಾಗಲು ಸಾಧ್ಯ. ಸರ್ಕಾರದ ಆದ್ಯತೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ ಎಂದು ವಿಪ ಸದಸ್ಯ ಎಸ್.ವಿ.ಸಂಕನೂರ ತಿಳಿಸಿದರು.