ಕನ್ನಡಪ್ರಭ ವಾರ್ತೆ ಬೆಳಗಾವಿ
ಕಪಿಲೇಶ್ವರ ದೇವಸ್ಥಾನ ಆವರಣದಲ್ಲಿರುವ ಹಳೆಯ ಮತ್ತು ಹೊಸ ಹೊಂಡ, ಜಕ್ಕೇರಿ ಹೊಂಡ, ಕಿಲ್ಲಾ ಕೆರೆ ಸೇರಿದಂತೆ ಪಾಲಿಕೆ ವ್ಯಾಪ್ತಿಯ ವಿವಿಧ ವಿಸರ್ಜನಾ ಸ್ಥಳಗಳಿಗೆ ಭೇಟಿ ನೀಡಿದ ಅವರು, ಸ್ವಚ್ಛತೆ, ಬೆಳಕಿನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಇದೇ ವೇಳೆ ಗಣೇಶ ವಿಸರ್ಜನಾ ಮೆರವಣಿಗೆ ಸಾಗುವ ಪ್ರಮುಖ ಮಾರ್ಗಗಳಿಗೆ ಭೇಟಿ ನೀಡಿ ರಸ್ತೆ ದುರಸ್ತಿ ಸೇರಿ ಕೈಗೊಂಡಿರುವ ಕಾಮಗಾರಿಗಳನ್ನೂ ವೀಕ್ಷಿಸಿದರು. ಕಳೆದ ಕೆಲವು ದಿನಗಳಿಂದ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಬಾಕಿ ಕೊನೆಯ ಹಂತದ ಸಿದ್ಧತೆಗಳನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವಿಸರ್ಜನಾ ಕಾರ್ಯಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮೇಯರ್ ಪ್ರೀತಿ ಕಾಮಕರ್ ಪಾಲಿಕೆ, ಎಲ್ ಆ್ಯಂಡ್ ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಸಭೆಗಳನ್ನು ನಡೆಸಿ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ಹೀಗಾಗಿ, ಯಾವುದೇ ಕಾರ್ಯ ಬಾಕಿ ಉಳಿದಿದ್ದರೆ ತಕ್ಷಣ ಗಮನಹರಿಸಿ ಮುಂಚಿತವಾಗಿ ಪೂರ್ಣಗೊಳಿಸಬೇಕು ಎಂದು ಉಪಮೇಯರ್ ಹಣಮಂತ ಕೊಂಗಾಲಿ ಅಧಿಕಾರಿಗಳಿಗೆ ಸೂಚಿಸಿದರು.ವಿಸರ್ಜನಾ ಹೊಂಡಗಳ ಆವರಣದಲ್ಲಿ ಕ್ರೇನ್, ಮಂಟಪ, ಧ್ವನಿವರ್ಧಕ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಪೊಲೀಸ್ ಇಲಾಖೆ, ಜೀವ ರಕ್ಷಕ ತಂಡ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತ ಕಾರ್ತಿಕ್.ಎಂ ಸೂಚಿಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಭಾತಕಂಡೆ, ನಗರಸೇವಕರಾದ ನಿತಿನ್ ಜಾಧವ ಸೇರಿದಂತೆ ಪಾಲಿಕೆ ಸದಸ್ಯರು, ಅಭಿಯಂತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.