ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಣೆ: ಡಾ.ಕೆ.ವಿದ್ಯಾಕುಮಾರಿ

KannadaprabhaNewsNetwork | Published : Oct 17, 2024 12:10 AM

ಸಾರಾಂಶ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿ ಡಾ. ವಿದ್ಯಾಕುಮಾರಿ ಹೇಳಿದರು. ಈ ಸಂದರ್ಭ ಸಾಧಕ ಗಣ್ಯರನ್ನು ಸನ್ಮಾನಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಣಿಪಾಲ

ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ. 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ.

ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

ಅಂದು ಬೆಳಗ್ಗೆ 8 ಗಂಟೆಗೆ ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.

ರಾಜ್ಯ ಸರ್ಕಾರದ ಸೂಚನೆಯಂತೆ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ದಿನದಂದು ನಗರದ ಅಜ್ಜರಕಾಡಿನ ಭುಜಂಗ ಪಾರ್ಕ್ನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಎಎಸ್‌ಪಿ ಕೆ.ಎಸ್. ಹೆಗ್ಡೆ, ನಗರಸಭೆ ಪೌರಾಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಡಿ.ಡಿ.ಪಿ.ಐ. ಗಣಪತಿ ಕೆ, ಡಿ.ಡಿ.ಪಿ.ಯು. ಮಾರುತಿ ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Share this article