ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, ನವೆಂಬರ್ 24ರಂದು ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರಿಗಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವಿಕಲಚೇತನರ ವಯೋಮಿತಿ ಮತ್ತು ಅಂಗವೈಕಲ್ಯದ ಸ್ವರೂಪಕ್ಕೆ ಅನುಗುಣವಾಗಿ ಮಡಿಕೆ ಒಡೆಯುವುದು, ಕೇನ್ ರೇಸ್, 100 ಮೀಟರ್ ಓಟ, ಬಕೆಟ್‍ಗೆ ರಿಂಗ್ ಎಸೆಯುವುದು, ಗುಂಡು ಎಸೆತ ಹಾಗೂ ಜಾವೆಲಿನ್ ಥ್ರೋ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಗಮಿಸುವ ವಿಕಲಚೇತನ ಮಕ್ಕಳನ್ನು ಸುರಕ್ಷಿತವಾಗಿ ಕರೆತಂದು, ಮರಳಿ ತಲುಪಿಸುವ ಜವಾಬ್ದಾರಿ ಆಯಾ ಶಾಲಾ ಮುಖ್ಯಸ್ಥರದ್ದಾಗಿರುತ್ತದೆ.ವಿಶ್ವ ವಿಕಲಚೇತನರ ದಿನಾಚರಣೆಯ ಜಿಲ್ಲಾಮಟ್ಟದ ವೇದಿಕೆ ಕಾರ್ಯಕ್ರಮವನ್ನು ಡಿಸೆಂಬರ್ 3ರಂದು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ವೈದ್ಯಕೀಯ ತಂಡ, ಆಂಬುಲೆನ್ಸ್, ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಮತ್ತು ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಕಲಚೇತನರನ್ನು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಾಲೂಕಿಗೊಬ್ಬ ವಿಕಲಚೇತನ ವಿದ್ಯಾರ್ಥಿಯನ್ನು ಗುರುತಿಸಿ ಸನ್ಮಾನಿಸಲಾಗುವುದು. ಪ್ಯಾರಾ ಒಲಂಪಿಕ್ಸ್ ಪದಕ ವಿಜೇತರಾದ ಜಿಲ್ಲೆಯ ಪಲ್ಲವಿ ಮತ್ತು ರಾಧಾ ವೆಂಕಟೇಶ್ ಅವರನ್ನೂ ಗೌರವಿಸಲು ಕ್ರಮ ಕೈಗೊಳ್ಳಲಾಗುವುದು. ಸಾಧಕರ ಮಾಹಿತಿಯನ್ನು ಸಂಘ-ಸಂಸ್ಥೆಗಳು ಇಲಾಖೆಗೆ ಒದಗಿಸಬೇಕು ಎಂದು ಮನವಿ ಮಾಡಿದರು.