- ಗಣ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವ ಸಿದ್ದತಾ ಸಭೆ
ಜಿಲ್ಲಾಡಳಿತದಿಂದ ಜ.26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಗಣ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಆಟದ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದ ಅವರು, ಪಥ ಸಂಚಲನದಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್‌ಸಿಸಿ ತಂಡಗಳು ಭಾಗವಹಿಸಲಿವೆ ಎಂದರು.ಕಾರ್ಯಕ್ರಮಗಳ ಸಿದ್ಧತೆಗೆ ವಿವಿಧ ಸಮಿತಿ ರಚಿಸಿ ಪೂರ್ವ ತಯಾರಿಗೆ ಉಪ ಸಮಿತಿಗಳು ಸಭೆ ಕರೆದು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಅವರು, ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ವರ್ಗ ಕಡ್ಡಾಯವಾಗಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಗಣ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಯಿತು.