ನೀರಿನ ಸಮಸ್ಯೆಯಾಗದಂತೆ ಕ್ರಮ

KannadaprabhaNewsNetwork |  
Published : Apr 11, 2025, 12:31 AM IST
09ಬಿಜಿಪಿ-1 | Kannada Prabha

ಸಾರಾಂಶ

ತಾಲೂಕಿನಲ್ಲಿ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ತಾಲೂಕಿನ ಲಘುಮದ್ದೇಪಲ್ಲಿ, ಮೂಗಚಿನ್ನೇಪಲ್ಲಿ ಮತ್ತು ಬೈರೇಪಲ್ಲಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಏ.22 ರಂದು ಜನಸ್ಪಂದನಾ ಕಾರ್ಯಕ್ರಮ ತಾಲೂಕಿನ ದೇವರಗುಡಿಪಲ್ಲಿಯಲ್ಲಿ ಆಯೋಜನೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಬೇಸಿಗೆ ಆರಂಭವಾಗಿದ್ದು ತಾಲೂಕಿನಲ್ಲಿ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಬುಧವಾರ ಶಾಸಕರ ನೇತೃತ್ವದಲ್ಲಿ ನಡೆದ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಾತನಾಡಿ, ಈ ಹಿಂದೆ ಮಳೆಯ ಅಭಾವದಿಂದ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಆದರೆ ಈಗ ಅಂತಹ ಪರಿಸ್ಥಿತಿ ಸದ್ಯಕ್ಕಿಲ್ಲ ಎಂದರು.

ಅದರೂ ಬೇಸಿಗೆಯ ಹಿನ್ನೆಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ತಕ್ಷಣ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಮುಂದಾಗುವಂತೆ ಪಿಡಿಒ ಗಳಿಗೆ ಸೂಚಿಸಿದರು. ಇದೇ ವೇಳೆ ತಾಲೂಕಿನಲ್ಲಿ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ತಾಲೂಕಿನ ಲಘುಮದ್ದೇಪಲ್ಲಿ, ಮೂಗಚಿನ್ನೇಪಲ್ಲಿ ಮತ್ತು ಬೈರೇಪಲ್ಲಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದರು.

ಇತ್ತೀಚೆಗೆ ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ, ಆದರೆ ರೈತರು ಬೆಳೆದಿರುವ ಬೆಳೆಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂಬುದಾಗಿ ತಿಳಿದುಬಂದಿದೆ. ಒಂದು ವೇಳೆ ನಷ್ಟ ಆಗಿದ್ದರೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

22ಕ್ಕೆ ಜನಸ್ಪಂದನ ಕಾರ್ಯಕ್ರಮ

ಏ.22 ರಂದು ಜನಸ್ಪಂದನಾ ಕಾರ್ಯಕ್ರಮ ತಾಲೂಕಿನ ದೇವರಗುಡಿಪಲ್ಲಿಯಲ್ಲಿ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ನೀಡಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಪ್ರತಿಭಾವಂತರಿಗೆ ಸನ್ಮಾನ

ಬಿಸಿಎಂ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 2024- 25 ನೇ ಸಾಲಿನ ದ್ವಿತೀಯ ಪಿಯುಸಿನಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.

ತಹಸೀಲ್ದಾರ್, ಮಹೇಶ್ ಪತ್ರಿ, ಇಒ ರಮೇಶ್, ಟಿಎಚ್‍ಒ ಡಾ.ಸತ್ಯನಾರಾಯಣರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಬಿಸಿಎಂ ಅಧಿಕಾರಿ ಶಿವಪ್ಪ ಮತ್ತಿತರರು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ