ಮಾಧ್ಯಮ ಮಾನ್ಯತೆ ಪತ್ರಕರ್ತರಿಗೆ ಮೀಡಿಯಾ ಕಿಟ್‌ : ಅರ್ಜಿ ಆಹ್ವಾನ

KannadaprabhaNewsNetwork |  
Published : Oct 26, 2024, 12:55 AM IST

ಸಾರಾಂಶ

Media Kit for Media Accreditation Journalists: Application Invitation

-ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಮಾಹಿತಿ

----

ಕನ್ನಡಪ್ರಭ ವಾರ್ತೆ ಯಾದಗಿರಿ

2024-25ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿ ಆಹ್ವಾನಿಸಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆ ಪಡೆದುಕೊಳ್ಳಬೇಕು. ಇಲಾಖೆಯ ಮಾನ್ಯತಾ ಕಾರ್ಡ್, ಮಾಧ್ಯಮ ಮಾನ್ಯತಾ ಕಾರ್ಡ್ ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ ಕಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿಮಾಡಿ ಸ್ವ ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಸಲ್ಲಿಸಬೇಕು.

ಅರ್ಜಿ ಸಲ್ಲಿಸ ಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡ್ ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪತ್ರಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯ ಲಗತ್ತಿಸಬೇಕು. ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿಸಲ್ಲಿಸಲು ನಿಗದಿಪಡಿಸಿರುವ ದಿನಾಂಕ ಒಳಗೆ ಸಲ್ಲಿಸಬೇಕು.

ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‌ಗಳನ್ನು ಪಡೆದಿರುವುದಿಲ್ಲ ಎಂದು 100 ರು.ಗಳ ಬಾಂಡ್‌ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.

ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆ ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ 2024ರ ನವೆಂಬರ್ 10ರ ಸಂಜೆ 5 ಗಂಟೆಯ ಒಳಗೆ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಭಾಗದಲ್ಲಿ ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗಾಗಿ ಅರ್ಜಿ ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು