ಕಲ್ಯಾಣ ಕರ್ನಾಟಕ ಉತ್ಸವ, ಗೌರಿ-ಗಣೇಶ ಹಬ್ಬದ ಸಿದ್ಧತೆಗೆ ಸಭೆ

KannadaprabhaNewsNetwork |  
Published : Sep 10, 2026, 02:15 AM IST
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಸೆ. 17ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಇಲಾಖಾವಾರು ಹಂಚಿಕೆ ಮಾಡಿರುವ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚಿಸಿದರು.

ಕೊಪ್ಪಳ: ಸೆ. 17ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಇಲಾಖಾವಾರು ಹಂಚಿಕೆ ಮಾಡಿರುವ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧ್ವಜಾರೋಹಣ ಹಾಗೂ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನಡೆಯಲಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಮಕ್ಕಳಿಗೆ ಉಪಾಹಾರ, ವೇದಿಕೆ, ಪೆಂಡಾಲ್, ಸ್ವಚ್ಛತೆ, ವಿದ್ಯುತ್ ದೀಪಾಲಂಕಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ಪೊಲೀಸ್ ಇಲಾಖೆಯಿಂದ ಪಥಸಂಚಲನ ನಡೆಸಬೇಕು. ಅಗ್ನಿಶಾಮಕ ವಾಹನ, ಆಂಬ್ಯುಲೆನ್ಸ್ ಹಾಗೂ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಜಿಪಂ ಸಭಾಂಗಣದಲ್ಲಿ ನಡೆದ ಗೌರಿ-ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸೆ. 14ರಂದು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ವಿಸರ್ಜನೆ ವರೆಗೆ ಶಾಂತಿ, ಸೌಹಾರ್ದತೆ ಕಾಪಾಡಬೇಕು. ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ಉಂಟುಮಾಡದಂತೆ ಹಬ್ಬ ಆಚರಿಸಬೇಕು. ಪೊಲೀಸ್ ಇಲಾಖೆಯ ಮಾರ್ಗಸೂಚಿ ಪಾಲಿಸಬೇಕು. ಡಿಜೆ ಧ್ವನಿಯ ಮಿತಿ, ವಿಸರ್ಜನೆಗೆ ನಿಗದಿತ ಸ್ಥಳ ಹಾಗೂ ಮೆರವಣಿಗೆ ಮಾರ್ಗವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಪಿಒಪಿ ಗಣೇಶ ಮೂರ್ತಿಗಳ ಬಳಕೆ ನಿಷೇಧಿಸಲಾಗಿದ್ದು, ಮಣ್ಣಿನ ಮೂರ್ತಿಗಳಿಗೆ ಆದ್ಯತೆ ನೀಡಬೇಕು. ಜಲಮೂಲಗಳ ಮಾಲಿನ್ಯ ತಪ್ಪಿಸಬೇಕು. ವಿದ್ಯುತ್ ಅವಘಡ ತಡೆಯಲು ಜೆಸ್ಕಾಂ ಅಧಿಕಾರಿಗಳು ಪ್ರತಿಷ್ಠಾಪನಾ ಸ್ಥಳಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಎಸ್ಪಿ ಸಾಹಿಲ್ ಬಾಗ್ಲಾ ಮಾತನಾಡಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸಬೇಕು. ಅನುಮತಿ ಇಲ್ಲದೆ ಡಿಜೆ, ಬ್ಯಾನರ್, ಬಂಟಿಂಗ್ಸ್ ಬಳಸಬಾರದು. ಮೆರವಣಿಗೆಯಲ್ಲಿ ಶಿಸ್ತು ಕಾಪಾಡಬೇಕು ಹಾಗೂ ಅಗ್ನಿ ಅವಘಡ ತಡೆಯಲು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಜಿಪಂ ಸಿಇಒ ವರ್ಣಿತ್ ನೇಗಿ, ಸಹಾಯಕ ಆಯುಕ್ತ ಮಹಮ್ಮದ್ ಜಿಲಾನಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಡಾ: ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮರು ಮಾರಾಟ!
ದೇಶಕ್ಕೆ ಆರೋಗ್ಯವಂತ ಸಮಾಜ ಅತ್ಯಗತ್ಯ