ಹಾವೇರಿ: ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಟ್ಟೀಹಳ್ಳಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿದ್ದ ರವೀಂದ್ರ ಹಾಗೂ ಉಪಾಧ್ಯಕ್ಷರಾಗಿದ್ದ ಶಿವಕುಮಾರ ಉಪ್ಪಾರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ರಟ್ಟೀಹಳ್ಳಿ ಪಪಂ ಚುಕ್ಕಾಣಿ ಹಿಡಿಯುವ ಕನಸು ಕಂಡಿದ್ದ ಕಾಂಗ್ರೆಸ್‌ಗೆ ನಿರಾಸೆಯಾಗಿತ್ತು. ಬಳಿಕ ಈ ಕುರಿತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿ, ಈ ಇಬ್ಬರು ಪಕ್ಷ ಜಾರಿಗೊಳಿಸಿದ ವಿಪ್ ಉಲ್ಲಂಘಿಸಿದ ಕಾರಣಕ್ಕಾಗಿ ಪಕ್ಷಾಂತರ ನಿಷೇಧ ಕಾಯ್ಕೆಯಡಿ ಇವರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಕೋರಿದ್ದರು. ಈ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು, ಇಬ್ಬರ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಪಕ್ಷಾಂತರ ನಿಷೇಧ ಕಾಯ್ದೆಯಡಿ ರಟ್ಟೀಹಳ್ಳಿ ಪಟ್ಟಣ ಪಂಚಾಯ್ತಿಯ 4ನೇ ವಾರ್ಡಿನ ರವೀಂದ್ರ ಮುದಿಯಪ್ಪನವರ ಹಾಗೂ 9ನೇ ವಾರ್ಡಿನ ಶಿವಕುಮಾರ ಉಪ್ಪಾರ ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು ಇಬ್ಬರ ಸದಸ್ಯತ್ವವನ್ನೂ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಪಕ್ಷಾಂತರಿಗಳಿಗೆ ಇದೊಂದು ದೊಡ್ಡ ಪಾಠವಾಗಿದೆ. ಇಬ್ಬರೂ ಕೂಡಲೇ ಅಧಿಕಾರ ತ್ಯಜಿಸಬೇಕು ಎಂದು ಜಿಲ್ಲಾ ಕಾಂಗ್ರೆಸೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.