ಮಾದಿಗ ಮುಖಂಡನ ಹತ್ಯೆ ಖಂಡಿಸಿ ಮನವಿ

KannadaprabhaNewsNetwork |  
Published : Aug 11, 2026, 02:00 AM IST
10ಜಿಡಿಜಿ20 | Kannada Prabha

ಸಾರಾಂಶ

ಪ್ರಕರಣದ ಎಂಟು ಆರೋಪಿಗಳ ಪೈಕಿ ನಾಲ್ವರನ್ನು ಮಾತ್ರ ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ರಾಜಕೀಯ ಒತ್ತಡಕ್ಕೆ ಮಣಿಯದೆ ತಕ್ಷಣವೇ ಬಂಧಿಸಿ ಗಲ್ಲಿಗೇರಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.

ಗದಗ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಂಕೇಶ್ವರಹಾಳ ಗ್ರಾಮದ ಮಾದಿಗ ಸಮುದಾಯದ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಭೂಮಾನಂದ ಹದ್ಲಿಹಾಳ ಅವರ ಅಮಾನುಷ ಹತ್ಯೆಯನ್ನು ಖಂಡಿಸಿ, ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಮಹಾಸಭಾದ ಪದಾಧಿಕಾರಿಗಳು, ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಹಾಗೂ ಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಪ್ರಕರಣದ ಎಂಟು ಆರೋಪಿಗಳ ಪೈಕಿ ನಾಲ್ವರನ್ನು ಮಾತ್ರ ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ರಾಜಕೀಯ ಒತ್ತಡಕ್ಕೆ ಮಣಿಯದೆ ತಕ್ಷಣವೇ ಬಂಧಿಸಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.

ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಭೂ ಒಡೆತನ ಯೋಜನೆಯಡಿ 10 ಎಕರೆ ಜಮೀನು ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಪ್ರಕರಣವನ್ನು ತ್ವರಿತ ನ್ಯಾಯಾಲಯ ಮೂಲಕ ವಿಚಾರಣೆ ನಡೆಸಿ ಗಲ್ಲು ಶಿಕ್ಷೆ ವಿಧಿಸಬೇಕು. ರೋಣ ತಾಲೂಕಿನ ಅರಹಣಸಿ ಗ್ರಾಮದ ದಲಿತ ಬುದ್ಧಿಮಾಂದ್ಯ ಯುವತಿ ಮೇಲಿನ ಅತ್ಯಾಚಾರ, ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಕುಂಬಾರಕೊಪ್ಪದಲ್ಲಿ ಮಾದಿಗ ಸಮುದಾಯದ ವ್ಯಕ್ತಿಯ ಹತ್ಯೆ ಹಾಗೂ ಯಾದಗಿರಿ ಜಿಲ್ಲೆಯ ಚಳಗೇರಿಯಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಯುವಕರ ಮೇಲಿನ ಹಲ್ಲೆ ಪ್ರಕರಣಗಳ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡೀಪಾರು ಮಾಡುವುದು ಸೇರಿದಂತೆ ಹಲವಾರು ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಾದಿಗ ಮಹಾಸಭಾದ ಗೌರವಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು ಸದಸ್ಯರು ಇದ್ದರು. ಕನಿಷ್ಠ ವೇತನ ಜಾರಿಗೆ ಆಗ್ರಹ

ಗದಗ: ಕಾರ್ಮಿಕ ಇಲಾಖೆ ಹೊರಡಿಸಿರುವ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯನ್ನು ಕಡ್ಡಾಯವಾಗಿ ಜಾರಿಗೆ ತರುವಂತೆ ಆಗ್ರಹಿಸಿ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಹುಸೇನಸಾಬ ಕನಕವಾಡ, ರಾಜ್ಯದ ವಿವಿಧ ಇಲಾಖೆಗಳಲ್ಲಿ 4.5 ಲಕ್ಷಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಜೀವನ ವೆಚ್ಚಕ್ಕೆ ಅನುಗುಣವಾಗಿ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಪಾವತಿಸಲು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸರ್ಕಾರ ನಿರ್ದೇಶನ ನೀಡಬೇಕು.ಸರ್ಕಾರಿ ಇಲಾಖೆಗಳು, ನಿಗಮ ಮಂಡಳಿಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಇದು ಅನ್ವಯವಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯೆ ಅಕ್ಕಮಹಾದೇವಿ ದಮ್ಮೂರ, ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರ, ಪ್ರಧಾನ ಕಾರ್ಯದರ್ಶಿ ಸಿದ್ಧಪ್ಪ ವಾಲಿಕಾರ, ಕಾರ್ಯದರ್ಶಿ ರಾಮಣ್ಣ ದೊಡ್ಡಮನಿ, ಮಲ್ಲಪ್ಪ ಭಾವಿಮನಿ, ಜಾವೇದ ನದಾಫ, ಪ್ರವೀಣ ಶಿಗಿಲಿ, ಮಂಜುನಾಥ ಹರ್ತಿ, ಉಮೇಶ ನೂಲ್ವಿ ಸೇರಿದಂತೆ ವಿವಿಧ ಇಲಾಖೆಗಳ ನೌಕರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘ ಹೋರಾಟಕ್ಕೆ ಇಲ್ಲ ನ್ಯಾಯ: ಮಂತ್ರಿ, ಶಾಸಕರನ್ನು ನಿಲ್ಲಿಸಿ ಕೇಳೋಣ
ಗುತ್ತಿಗೆ ಕಾರ್ಮಿಕರ ಸೇವೆ ಕಾಯಂ ಮಾಡಿ: ಸಿಐಟಿಯು ಪ್ರತಿಭಟನೆ