ಮಹಿಳೆಯರ ಯಶಸ್ಸಿಗೆ ಪುರುಷರೂ ಕಾರಣ

KannadaprabhaNewsNetwork |  
Published : Mar 15, 2024, 01:15 AM IST
14ಸಿಎಚ್‌ಎನ್‌65ಚಾಮರಾಜನಗರದ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಗ್ರಂಥಾಲಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಹಲವಾರು ಮಹಿಳೆಯರ ಯಶಸ್ಸಿಗೆ ಪುರುಷರು ಸಹ ಕಾರಣರಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಹಲವಾರು ಮಹಿಳೆಯರ ಯಶಸ್ಸಿಗೆ ಪುರುಷರು ಸಹ ಕಾರಣರಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಗ್ರಂಥಾಲಯ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಕಷ್ಟು ಮಂದಿ ಪುರುಷರ ಯಶಸ್ಸಿಗೆ ಮಹಿಳೆಯರು ಕಾರಣರಾಗಿದ್ದಾರೆ ಎನ್ನುವುದು ಸರ್ವೇ ಸಾಮಾನ್ಯವಾಗಿದೆ. ಮಹಿಳೆಯರು ಕೂಡ ಉನ್ನತ ಶಿಕ್ಷಣ ಪಡೆದು ದೇಶದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಇತ್ತೀಚಿನ ಬೆಳವಣಿಗೆಯಾಗಿದ್ದು, ಮಹಿಳೆಯರ ಯಶಸ್ಸಿನ ಹಿಂದೆ ಸಾಕಷ್ಟು ಪುರುಷರ ಕಠಿಣ ಪರಿಶ್ರಮವಿದೆ. ಮಹಿಳೆಯರು ದಕ್ಷತೆ, ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುವ ಮೂಲಕ ಮಹಿಳಾ ದಿನಾಚರಣೆಗೆ ಸಾರ್ಥಕತೆ ತಂದಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಚಾಮರಾಜನಗರ ಸುಂದರವಾದ ಜಿಲ್ಲೆಯಾಗಿದ್ದು, ಇಲ್ಲಿ ಸೇವೆ ಸಲ್ಲಿಸುವ ಪುಣ್ಯದ ಕೆಲಸ ನಮ್ಮದಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಹಿಳಾ ಅಧಿಕಾರಿಗಳಿದ್ದು, ಒಂದು ತಂಡವಾಗಿ ಸೇವೆ ಸಲ್ಲಿಸಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ನ್ಯಾಯಾಂಗ ವ್ಯವಸ್ಥೆ ಸಮನ್ವಯದಿಂದ ಕೆಲಸ ಮಾಡಲಿವೆ ಎಂದರು.ಮಹಿಳೆಯರು ಉತ್ತಮ ಸಾಧನೆಗೆ ಸಾಕಷ್ಟು ಪರಿಶ್ರಮ ಹಾಕಬೇಕು. ಸಾಮಾಜಿಕವಾಗಿ, ಕೌಟುಂಬಿಕವಾಗಿ ಮಹಿಳೆ, ಪರುಷರಲ್ಲಿ ಯಾರು ಮೇಲು-ಕೀಳಲ್ಲ. ಇಬ್ಬರೂ ಸಮಾನರಾಗಿದ್ದಾರೆ. ಮಹಿಳೆ ಪುರುಷರಿಬ್ಬರು ಸೌಹಾರ್ದತೆ, ಹೊಂದಾಣಿಕೆ, ಸಾಮರಸ್ಯದಿಂದ ಮುನ್ನಡೆದಾಗ ಮಾತ್ರ ಇಬ್ಬರಿಗೂ ಯಶಸ್ಸು ಸಾಧ್ಯವಾಗಲಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಆಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಮಾತನಾಡಿ ಹೆಣ್ಣು ಸಹನಾಮಯಿ. ಸಹಜೀವನಕ್ಕೆ ಅವಳೇ ಮಾದರಿ. ಭಾರತ ಇಡೀ ಜಗತ್ತಿಗೆ ಉತ್ತಮ ಸಂಸ್ಕಾರವನ್ನು ನೀಡಿದ ದೇಶ. ಇದರಲ್ಲಿ ಮಹಿಳೆಯರ ಪಾಲು ಅಧಿಕವಾಗಿದೆ. ಆದರೂ ಇತ್ತಿಚೀನ ದಿನಗಳಲ್ಲಿ ಹೆಚ್ಚಿನ ವಿವಾಹ ವಿಚ್ಛೇದನಾ ಪ್ರಕರಣಗಳು ದಾಖಲಾಗುತ್ತಿದೆ. ಇದು ಆತಂಕಕಾರಿ ಸಂಗತಿ. 12ನೇ ಶತಮಾನದಲ್ಲಿ ಬಸವಣ್ಣನವರು ಹಾಗೂ 21 ನೇ ಶತಮಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮಹಿಳೆಯರಿಗೆ ಉತ್ತಮ ಅವಕಾಶಗಳನ್ನು ನೀಡಿ ಮಹಿಳೆಯರ ಉನ್ನತಿ ಬಯಸಿದ್ದರು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್ಪಿ ಪದ್ಮಿನಿ ಸಾಹು, ಎಡಿಸಿ ಗೀತಾ ಹುಡೇದ, ಕೊಳ್ಳೇಗಾಲ ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶ ಎನ್.ಆರ್. ಲೋಕಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಕಾರ್ಯಕ್ರಮದಲ್ಲಿ ಮಹಿಳಾ ದಿನದ ವಿಶೇಷತೆ ಕುರಿತು ಮಾತನಾಡಿದರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲೆಯ ಮಹಿಳಾ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಸ್ಪರ್ಧೆ, ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಜೆಎಂಎಫ್‌ಸಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂಪಕಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎನ್, ನಿವೇದಿತಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ ವೀರೂಪಾಕ್ಷಸ್ವಾಮಿ, ಉಪಾಧ್ಯಕ್ಷ ಮಂಜು ಹರವೆ, ಜಂಟಿ ಕಾರ್ಯದರ್ಶಿ ಮಂಜು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌