ಕನ್ನಡಪ್ರಭ ವಾರ್ತೆ ಬೆಂಗಳೂರು
ಶನಿವಾರ ನಗರದ ಫ್ರೀಡಂಪಾರ್ಕ್‌ನಲ್ಲಿ ಬಿಜೆಪಿ ರೈತಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು, ಹಾಲಿನ ಪಾಕೆಟ್ ಪ್ರದರ್ಶಿಸಿದ್ದಲ್ಲದೆ ಹಸು ಹಿಡಿದುಕೊಂಡು ಕಿಡಿಕಾರಿದರು. ಸೌದೆ ಒಲೆ ಉರಿಸಿ ಹಾಲು ಕಾಯಿಸುವ ಮೂಲಕ ಹಾಲಿನ ದರ ಏರಿಕೆಯನ್ನು ವಿರೋಧಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾನಿರತರು ಹಾಲಿನ ದರ, ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಬರೆ ಭಾಗ್ಯ ಕೊಟ್ಟಿದೆ ಟೀಕಾಪ್ರಹಾರ ನಡೆಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ವಿಪರೀತ ಹೊರೆ ಆಗಿದ್ದು, ಹೆಚ್ಚಿಸಿದ ದರವನ್ನು ವಾಪಸ್ ಪಡೆಯಬೇಕು. ರೈತರಿಗೆ ಬರೆ ಹಾಕುವ ಸರ್ಕಾರದ ನೀತಿ ನಿರ್ಧಾರಗಳನ್ನು ಬದಲಿಸಬೇಕು ಎಂದು ಆಗ್ರಹಿಸಿದರು.ರೈತರಿಗೆ ನೀಡುತ್ತಿದ್ದ ನಾಲ್ಕು ಸಾವಿರ ರು. ಕಿಸಾನ್ ಸಮ್ಮಾನ್ ಮೊತ್ತವನ್ನು ರೈತರ ಖಾತೆಗೆ ವರ್ಗಾಯಿಸಬೇಕು. ಕಳೆದ ಎಂಟು ತಿಂಗಳಿಂದ 957 ಕೋಟಿ ರು. ಹಾಲು ಉತ್ಪಾದಕರಿಗೆ ಕೊಡಬೇಕಾದ ಮೊತ್ತ ಬಾಕಿ ಉಳಿದಿದೆ. ಅದನ್ನು ಕೂಡಲೇ ಬಿಡುಗಡೆ ಮಾಡಿ ರೈತರ ನೆರವಿಗೆ ಧಾವಿಸಬೇಕು. ಬಿತ್ತನೆ ಬೀಜ, ಗೊಬ್ಬರದ ದರ ಗಗನಕ್ಕೆ ಹೆಚ್ಚಳವಾಗಿದ್ದು, ಹಿಂದಿನ ದರದಲ್ಲಿಯೇ ಸಿಗುವಂತೆ ಕ್ರಮ ಕೈಗೊಳ್ಳಬೇಕು. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನವಾಗಿ 6 ಸಾವಿರದಿಂದ 18 ಸಾವಿರ ರು. ವರೆಗೆ ನೀಡಲಾಗುತ್ತಿತ್ತು. ಅದನ್ನು ಮತ್ತೆ ಪುನರಾರಂಭಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.