-ಬೃಹತ್ ಆರೋಗ್ಯ ಮೇಳಕ್ಕೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಚಾಲನೆ
----ಕನ್ನಡಪ್ರಭ ವಾರ್ತೆ ಮಾನ್ವಿ
ಬಡವರ ಆರೋಗ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರವು ಅನೇಕ ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರು ಶಿಬಿರದ ಲಾಭ ಪಡೆದು ಆರೋಗ್ಯದ ಕಡೆಗೆ ಹಚ್ಚಿನ ಗಮನಹರಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ಮೇಳ-2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯ ಶಿಬಿರದ ಸದ್ಬಳಕೆಯನ್ನು ಸಾರ್ವಜನಿಕರು ಮಾಡಿಕೊಳ್ಳಬೇಕು. ಜನರ ಆರೋಗ್ಯದ ಕಾಳಜಿಯನ್ನು ಸರ್ಕಾರ ಹೊಂದಿದೆ. ಸಾರ್ವಜನಿಕರು ವೈದ್ಯರೊಂದಿಗೆ ಮುಕ್ತವಾಗಿ ತಮ್ಮ ಸಮಸ್ಯೆಗಳನ್ನು ಹೇಳಿ, ಕಡಿಮೆ ಖರ್ಚಿನಲ್ಲಿ ಉತ್ತಮ ಚಿಕಿತ್ಸೆ ಪಡೆದುಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಚಿವ ಎನ್.ಎಸ್.ಬೋಸರಾಜ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಬಡವರ ಆರೋಗ್ಯದ ದೃಷ್ಟಿಯಿಂದ ಅನೇಕ ಉಚಿತ ಶಿಬಿರ ನಡೆಸುತ್ತಿದೆ ಎಂದರು.ಸಂಸದ ಜಿ.ಕುಮಾರ ನಾಯಕ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂಬ ಮಾತಿದೆ. ಆದರೆ, ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡುವುದು ತಪ್ಪಲ್ಲ. ಆರೋಗ್ಯ ಕ್ಷೇತ್ರಕ್ಕೆ ಸರ್ಕಾರಗಳು ಹೆಚ್ಚಿನ ಅನುದಾನ ಮೀಸಲಿಟ್ಟು, ಜನರ ಆರೋಗ್ಯದತ್ತ ಕಾಳಜಿ ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಶಾಸಕ ಜಿ.ಹಂಪಯ್ಯ ನಾಯಕ, ಪುರಸಭೆ ಅಧ್ಯಕ್ಷೆ ಲಕ್ಷ್ಮೀ, ಡಿಸಿ ನಿತೀಶ್ ಕೆ., ಸಿಇಒ ಪಾಂಡ್ವೆ ರಾಹುಲ್ ತುಕಾರಾಮ್, ಎಸ್ಪಿ ಪುಟ್ಟಮಾದಯ್ಯ ಎಂ, ಆರೋಗ್ಯ ಇಲಾಖೆಯ ಆಯುಕ್ತ ಕೆ.ಬಿ. ಶಿವುಕುಮಾರ್, ಎಸಿ ಗಜಾನನ ಬಾಳೆ, ಡಿಎಚ್ಒ ಡಾ.ಸುರೇಂದ್ರ ಬಾಬು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.---------------------
15ಕೆಪಿಎಂಎನ್‌ವಿ01: ಮಾನ್ವಿ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ಮೇಳದಲ್ಲಿ ಭಾಗವಹಿಸಿದ್ದ ಜನರು.